ಧರ್ಮಸ್ಥಳ: ನೇತ್ರಾವತಿ ನದಿ ಸ್ನಾನಘಟ್ಟದಲ್ಲಿ ಸ್ವಚ್ಛತಾ ಅಭಿಯಾನ.

ಧರ್ಮಸ್ಥಳ: ಬೆಂಗಳೂರಿನ ಯುವ ಬ್ರಿಗೇಡ್ ಮಾರ್ಗದರ್ಶಕರಾದ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಜೂ.3 ರಂದು ಬೆಳಿಗ್ಗೆ 6.00 ಗಂಟೆಯಿಂದ ಸಂಜೆ 6.00 ಗಂಟೆ ವರೆಗೆ ರಾಜ್ಯದೆಲ್ಲೆಡೆಯಿಂದ ಬಂದ 500ಕ್ಕೂ ಮಿಕ್ಕಿ ಕಾರ್ಯಕರ್ತರು ನೇತ್ರಾವತಿ ನದಿಯ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು. ಸ್ವತಃ ಚಕ್ರವರ್ತಿ ಸೂಲಿಬೆಲೆ ನದಿ ನೀರಿಗೆ ಇಳಿದು ಸ್ವಚ್ಛತಾ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾರ್ಯಕರ್ತರನ್ನು ಹುರಿದುಂಬಿಸಿದರು.
ಸ್ನಾನ ಮಾಡುವ ನೆಪದಲ್ಲಿ, ವಿಭಿನ್ನ ಆಚರಣೆಗಳ ಹಿನ್ನೆಲೆಯಲ್ಲಿ ಮೂಢ ನಂಬಿಕೆಯಿಂದ ನಾವೆಲ್ಲ ನೇತ್ರಾವತಿ ನದಿಯನ್ನು ಕಲುಷಿತಗೊಳಿಸಿದ್ದೇವೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಹಾಗೂ ಅನುಮತಿಯೊಂದಿಗೆ ನಾವು ಇಂದು ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ ಮಾಡಿದ್ದೇವೆ. ದಯಮಾಡಿ ನದಿಯನ್ನು ಎಂದಿಗೂ ಕಲುಷಿತಗೊಳಿಸಬೇಡಿ, ಕೊಳಕು ಮಾಡಬೇಡಿ ಎಂದು ಯುವ ಬ್ರಿಗೇಡ್ ಕಾರ್ಯಕರ್ತರು ಭಕ್ತರಿಗೆ ಕರೆ ನೀಡಿದ್ದಾರೆ.
ಸ್ನಾನ ಮಾಡಿ ನದಿ ನೀರಿನಲ್ಲೆ ಬಟ್ಟೆ ಒಗೆಯುವುದರಿಂದ, ತ್ಯಾಜ್ಯಗಳನ್ನು ಹಾಕುವುದರಿಂದ ಪಾವಿತ್ರ್ಯಕ್ಕೆ ಧಕ್ಕೆಯಾಗುವುದಲ್ಲದೆ ಅನಾರೋಗ್ಯಕರ ಪರಿಸರ ನಿರ್ಮಾಣವಾಗುತ್ತದೆ. ತೀರ್ಥಕ್ಷೇತ್ರದಲ್ಲಿರುವ ನದಿಗಳಲ್ಲಿ ಬಟ್ಟೆ ಒಗೆಯದಂತೆ ಸರ್ಕಾರವೆ ಕಡ್ಡಾಯ ಕಾನೂನು ಜಾರಿ ಮಾಡಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ. ಯುವಾ ಬ್ರಿಗೇಡ್ ಕಾರ್ಯಕರ್ತರ ಸೇವೆಯನ್ನು ಶ್ಲಾಘಿಸಿದ ಅವರು ಭಕ್ತರು ಕೂಡಾ ಮೂಢನಂಬಿಕೆಗೆ ಒಳಗಾಗದೆ ಎಚ್ಚರಿಕೆ ಮತ್ತು ಹೊಣೆಗಾರಿಕೆಯಿಂದ ನದಿಯ ಪಾವಿತ್ರ್ಯ ಕಾಪಾಡಬೇಕು. ಇದು ರಾಷ್ಟ್ರವ್ಯಾಪಿ ಆಂದೋಲನವಾಗಬೇಕು ಎಂದು ಅವರು ಸಲಹೆ ನೀಡಿದರು.
ಶಾಲಾ-ಕಾಲೇಜುಗಳಲ್ಲಿರುವ ಎನ್.ಸಿ.ಸಿ. ಹಾಗೂ ಎನ್.ಎಸ್.ಎಸ್. ಸ್ವಯಂ ಸೇವಕರು ಕೂಡಾ ಸ್ವಚ್ಛತೆ ಮತ್ತು ಪಾವಿತ್ರ್ಯತೆ ಕಾಪಾಡುವ ಬಗ್ಗೆ ಅರಿವು, ಜಾಗೃತಿ ಮೂಡಿಸಬೇಕು ಎಂದು ಹೆಗ್ಗಡೆಯವರು ಕಿವಿಮಾತು ಹೇಳಿದರು. ಧರ್ಮಸ್ಥಳ ದೇವಸ್ಥಾನದ ವತಿಯಿಂದ ಕಾರ್ಯಕರ್ತರಿಗೆಲ್ಲ ಉಚಿತ ಊಟ, ವಸತಿ ಮತ್ತು ಉಪಾಹಾರದ ವ್ಯವಸ್ಥೆ ಮಾಡಲಾಯಿತು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.