ಮುಚ್ಚುವ ಹಂತದಲ್ಲಿದ್ದ ಕೂಕ್ರಬೆಟ್ಟು ಶಾಲೆಯಲ್ಲಿ ಸಂಭ್ರಮ

Advt_NewsUnder_1
Advt_NewsUnder_1
Advt_NewsUnder_1

ಶಾಲಾ ಪ್ರಾರಂಭೋತ್ಸವದಲ್ಲಿ 80 ಮಕ್ಕಳು

ಮರೋಡಿ: ಮಕ್ಕಳ ಕೊರತೆಯಿಂದ ಮುಚ್ಚುವ ಹಂತದಲ್ಲಿದ್ದ ತಾಲೂಕಿನ ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮೇ.29 ರಂದು ಶಾಲಾ ಪ್ರಾರಂಭೋತ್ಸವ ಅದ್ಧೂರಿಯಾಗಿ ಜರುಗಿತು.
ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ ಈ ಶಾಲೆಯಲ್ಲಿ ಆರಂಭಿಸಿದ ಎಲ್‌ಕೆಜಿ ಮತ್ತು ಯುಕೆಜಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಷ್ಟು ಉತ್ತಮ ಪ್ರತಿಕ್ರಿಯೆ ತಾಲೂಕಿನ ಬೇರೆ ಸರ್ಕಾರಿ ಶಾಲೆಯಲ್ಲಿ ಕಂಡಿಲ್ಲ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಅದು ಸಾಕಾರಗೊಂಡರೆ ಯಾವುದೇ ಸರ್ಕಾರಿ ಶಾಲೆ ಮುಚ್ಚುವುದಿಲ್ಲ. ಈ ಶಾಲೆ ರಾಜ್ಯಕ್ಕೆ ಮಾದರಿಯಾಗಿ ಬೆಳೆಯಲಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಮರೋಡಿ ಸಮಿತಿಯ ಅಧ್ಯಕ್ಷ ಜಯಂತ ಕೋಟ್ಯಾನ್ ಮಾತನಾಡಿ, ಶಾಲೆ ಎಂಬುದು ಮತ್ತೊಂದು ದೇವಸ್ಥಾನ ಇದ್ದಂತೆ. ಇಲ್ಲಿ ಯಾವುದೇ ರಾಜಕೀಯಕ್ಕೆ ಅವಕಾಶ ಇಲ್ಲ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ, ಅವರನ್ನು ಸಮಾಜದ ಆಸ್ತಿಯಾಗಿ ಬೆಳೆಸುವ ಕಾರ್ಯ ಆಗಬೇಕಿದೆ. ಸರ್ಕಾರಿ ಶಾಲೆ ಉಳಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.
ನಿವೃತ್ತ ಶಿಕ್ಷಕ ಅಣ್ಣಪ್ಪ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೂಕ್ರಬೆಟ್ಟು ಶಾಲೆಯ ಗತವೈಭವ ಮರುಕಳಿಸುತ್ತಿರುವುದು ಇಡೀ ಗ್ರಾಮಕ್ಕೆ ಸಂತಸದ ವಿಚಾರ. ಗ್ರಾಮದ ಶಾಲೆಯು ಊರಿನ ಆಸ್ತಿಯಾಗಿದ್ದು, ಅದರ ಅಳಿವು, ಉಳಿವು ಗ್ರಾಮಸ್ಥರ ಕೈಯಲ್ಲಿದೆ ಎಂದರು.
ಈ ಸಂದರ್ಭದಲ್ಲಿ ಮರೋಡಿ ಗ್ರಾ.ಪಂ.ಉಪಾಧ್ಯಕ್ಷೆ ವನಿತಾ, ಸದಸ್ಯ ಕೃಷ್ಣಪ್ಪ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜು ಪೂಜಾರಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಶ್ ಹಾರೊದ್ದು, ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಕಾರ್ಯದರ್ಶಿ ನಾರಾಯಣ ಪೂಜಾರಿ, ಸದಸ್ಯರು, ಎಸ್‌ಡಿಎಂಸಿ ಸದಸ್ಯರು, ಹಳೆವಿದ್ಯಾರ್ಥಿಗಳು, ಮಕ್ಕಳ ಪೋಷಕರು, ಶಿಕ್ಷಣಾಭಿಮಾನಿಗಳು, ಶಿಕ್ಷಕರು, ಮತ್ತಿತರಗಣ್ಯರು ಭಾಗವಹಿಸಿದ್ದರು.
ಮುಖ್ಯ ಶಿಕ್ಷಕಿ ಸುಫಲಾ ಸ್ವಾಗತಿಸಿ, ಶಿಕ್ಷಕಿ ಹರ್ಷಲಾ ಕಾರ್ಯಕ್ರಮ ನಿರೂಪಿಸಿ, ಬಾಲಕೃಷ್ಣ ಬಂಗೇರ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.