ಬೆಳ್ತಂಗಡಿ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ರಾಜ್ಯದಾದ್ಯಂತ ಸುಮಾರು 400 ಮಂದಿ ಶಿಕ್ಷಕರು ಯಾವುದೇ ಸೇವಾ ಭದ್ರತೆ ಇಲ್ಲದೇ ಕನಿಷ್ಠ ವೇತನಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ.
2022 ಸೆಪ್ಟೆಂಬರ್ ನಲ್ಲಿ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಗೊಂಡು ದೂರು ಅರ್ಜಿ ಸಮಿತಿಯಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಹೊರಗುತ್ತಿಗೆ ಆಧಾರದಲ್ಲಿ ಕನಿಷ್ಠ ವೇತನಕ್ಕೆ ದುಡಿಯುತ್ತಿರುವ ವಾಲ್ಮೀಕಿ ಆಶ್ರಮ ಶಾಲೆಗಳ ಶಿಕ್ಷಕರಿಗೆ ಸೇವಾಭಧ್ರತೆ ಹಾಗೂ ಮೂಲವೇತನವನ್ನು ಮಂಜೂರು ಮಾಡಿ ಕಡತವನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು.
ಇದೀಗ ಈ ಕಡತವು ಯಾವುದೇ ಪ್ರಗತಿ ಕಾಣದೇ ಹಣಕಾಸು ಇಲಾಖೆಯಲ್ಲಿ ಬಾಕಿಯಾಗಿದೆ.
ಈ ಬಗ್ಗೆ ಬೆಳ್ತಂಗಡಿ ತಾಲೂಕಿನ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ನಿಯೋಗದ ಮೂಲಕ ಶಾಸಕ ಹರೀಶ್ ಪೂಂಜರನ್ನು ಭೇಟಿ ಮಾಡಿ ಸಮಸ್ಯೆಯನ್ನು ವಿವರಿಸಿ ರಾಜ್ಯದ ಎಲ್ಲಾ ವಾಲ್ಮೀಕಿ ಆಶ್ರಮ ಶಾಲೆಗಳ 400 ಶಿಕ್ಷಕರಿಗೆ ನ್ಯಾಯ ಒದಗಿಸಿಕೊಡಬೇಕಾಗಿ ಮನವಿ ಸಲ್ಲಿಸಲಾಯಿತು..
ಈ ಬಗ್ಗೆ ಸಂಬಂಧಪಟ್ಟವರ ಜೊತೆ ಚರ್ಚಿಸಿ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ಶಾಸಕರು ಭರವಸೆ ನೀಡಿದರು.