ಬೆಳ್ತಂಗಡಿ: ಮಹಾತ್ಮಾ ಗಾಂಧಿಯವರ ಕಲ್ಪನೆಯಂತೆ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತಿರುವ ಗ್ರಾಮ ಪಂಚಾಯತ್ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಸಾಧ್ಯವಿಲ್ಲ ಎಂಬ ಕೋಟ ಶ್ರೀನಿವಾಸ್ ಪೂಜಾರಿ ಅವರ ಹೇಳಿಕೆ ಬಾಲಿಶತನದಿಂದ ಕೂಡಿದೆ ಎಂದು ಕೆಪಿಸಿಸಿ ಕರ್ನಾಟಕ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.
ಒಂದು ಗ್ರಾಮದ ಅಭಿವೃದ್ಧಿಯಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತಿರುವವರನ್ನು ಖಾಯಂ ಗೊಳಿಸಲು ಸಾಧ್ಯವಿಲ್ಲದ ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರವು ಅತ್ಯಂತ ಬೇಜಬ್ದಾರಿತನದಿಂದ ನಡೆದುಕೊಂಡಿದೆ. ಕನಿಷ್ಟ ವೇತನ ಸೇರಿದಂತೆ ಹಲವಾರು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಗ್ರಾಮ ಪಂಚಾಯತ್ ನೌಕರರಿಗೆ ಅಂತಾರಾಷ್ಟ್ರೀಯ ಕಾರ್ಮಿಕ ಕಾನೂನಿನ ಪ್ರಕಾರ ವೇತನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ರಾಜ್ಯ ಸರ್ಕಾರದ ಪರವಾಗಿ ಸಚಿವರು ನೀಡಿರುವ ಹೇಳಿಕೆಯನ್ನು ತಕ್ಷಣ ವಾಪಸ್ ಪಡೆಯುವ ಮೂಲಕ ಗ್ರಾಮ ಪಂಚಾಯತ್ ನೌಕರರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸುತ್ತೇನೆ. ರಾಜ್ಯದ ಗ್ರಾಮ ಪಂಚಾಯತ್ ನೌಕರರು ಸೇರಿದಂತೆ ಅವರ ಕುಟುಂಬಸ್ಥರು ಮುಂದಿನ ಚುನಾವಣೆಯಲ್ಲಿ ಈ ದುರಂಹಕಾರಿ ರಾಜ್ಯ ಸರ್ಕಾರಕ್ಕೆ ಸರಿಯಾದ ಪಾಠ ಕಲಿಸಲಿದ್ದಾರೆ. ಗ್ರಾಮ ಪಂಚಾಯತ್. ನೌಕರರು ಬೆಂಗಳೂರಿನಲ್ಲಿ ನಡೆಸಿದ ಹೋರಾಟದ ಸಂದರ್ಭದಲ್ಲಿಯೂ ಹೋರಾಟಗಾರರಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರ ವಿಫಲವಾಗಿತ್ತು. ಇದನೆಲ್ಲ ನೌಕರರು ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ.