ಬೆಳ್ತಂಗಡಿ :ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 24 ಕೊಲೆ ಆರೋಪ ಹೊರಿಸಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಎರಡು ದಿನಗಳೊಳಗೆ ಕ್ಷಮೆ ಯಾಚಿಸದಿದ್ದರೆ ಸಿವಿಲ್ ಮತ್ತು ಕ್ರಿಮಿನಲ್ ಎರಡೂ ರೀತಿಯ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.ಅವರು ಮಂಗಳೂರಿನಲ್ಲಿ ಮೇ.25 ರಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಹಿಂದೂ ವಿರೋಧಿ ಎಂದು ಬಿಂಬಿಸಲು ಬಿಜೆಪಿ ನಿರಂತರ ಪ್ರಯತ್ನಿಸುತ್ತಿದೆ.ಆದರೆ ನಾವು ಯಾವತ್ತೂ ಹಿಂದೂ ವಿರೋಧಿಗಳು ಆಗಿರಲಿಲ್ಲ.ಶರತ್ ಮಡಿವಾಳ, ಪ್ರವೀಣ್ ನೆಟ್ಟಾರು ಕೊಲೆಗಳನ್ನು ಯಾರು ಮಾಡಿಸಿದ್ದು ಎನ್ನುವುದನ್ನು – ಹಿಂದು ಕಾರ್ಯಕರ್ತರೇ ಹೇಳುತ್ತಿದ್ದಾರೆ.ಹೀಗಿದ್ದರೂ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಕಳೆದ ಮೂರು ಮುಕ್ಕಾಲು ವರ್ಷ ಬಿಜೆಪಿ ಸರ್ಕಾರವೇ ರಾಜ್ಯದಲ್ಲಿತ್ತು. ಸಿದ್ದರಾಮಯ್ಯ ಕೊಲೆ ಮಾಡಿದ್ದರೆ ಯಾಕೆ ತನಿಖೆ ನಡೆಸಿಲ್ಲ? ಬಿಜೆಪಿಯ ನಕಲಿ ಹಿಂದುತ್ವವನ್ನು ಜನರು ಈಗಾಗಲೇ ತಿರಸ್ಕರಿಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಂವಿಧಾನ ವಿರೋಧಿಯಾಗಿ ಬಿಜೆಪಿ ಬದಲಾಯಿಸಿರುವ ಶಾಲಾ ಪಠ್ಯವನ್ನು ಮರು ಪರಿಷ್ಕರಣೆ ಮಾಡಲು ಸಿಎಂ ಮತ್ತು ಡಿಸಿಎಂ ಅವರಿಗೆ ಮನವಿ ಸಲ್ಲಿಸಿದ್ದೇನೆ. ಪಠ್ಯ ಪರಿಷ್ಕರಣಿ ಮುಂದಿನ ದಿನಗಳಲ್ಲಿ ಆಗಲಿದೆ ಎಂದು ಹೇಳಿದರು.
ಕಾಂಗ್ರೆಸ್ ಮುಖಂಡರಾದ ಮನೋರಾಜ್, ಶಾಲೆಟ್ ಪಿಂಟೊ, ಟಿ.ಕೆ. ಸುಧೀರ್, ಸಂತೋಷ್ ಕುಮಾರ್ ಶೆಟ್ಟಿ, ಜಯಶೀಲ ಅಡ್ಯಂತಾಯ ಸುದ್ದಿಗೋಷ್ಠಿಯಲ್ಲಿದ್ದರು.