ವೇಣೂರು: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ಫೆ.22 ರಿಂದ ಮಾ.1ರ ವರೆಗೆ ನಡೆಯಲಿದ್ದು ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನದ ಉದ್ಘಾಟನೆ ಫೆ.22ರಂದು ಭರತೇಶ ಸಮುದಾಯ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಪರಮ ಪೂಜ್ಯ 108 ಶ್ರೀ ಅಮೋಘಕೀರ್ತಿ ಮತ್ತು ಪರಮ ಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜರ ದಿವ್ಯ ಉಪಸ್ಥಿತಿಯಲ್ಲಿ ದೀಪ ಬೆಳಗಿಸಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಉದ್ಘಾಟಿಸಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಇದೇ ಸಂದರ್ಭದಲ್ಲಿ ಸಿರಿ ಬಾಹುಬಲಿ ಸ್ಮರಣ ಸಂಚಿಕೆಯನ್ನು ಬಿಡುಗಡೆ ಹಾಗೂ ವಸ್ತು ಪ್ರದರ್ಶನ ಉದ್ಘಾಟನೆ ನಡೆಯಿತು.
ಮೂಡಬಿದ್ರೆ ಜೈನ್ ಮಠದ ಡಾ.ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ಮಹಾ ಸ್ವಾಮೀಜಿ ಆಶೀರ್ವಚನಗೈದರು.ಸ್ಥಾಪಕ ವಂಶಿಯ ಅರಸರು ಮತ್ತು ಸಮಿತಿಯ ಕಾರ್ಯಾಧ್ಯಕ್ಷ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ಅಭಯಚಂದ್ರ ಜೈನ್ ಮೂಡಬಿದ್ರೆ, ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ನೇಮಯ್ಯ ಕುಲಾಲ್, ಸಮಿತಿಯ ಪ್ರಧಾನ ಸಂಚಾಲಕರು ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್, ಪ್ರಧಾನ ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ, ಕೋಶಾಧಿಕಾರಿ ಜಯರಾಜ್ ಕಂಬಳಿ, ಶಿವಪ್ರಸಾದ್ ಅಜಿಲರು ಅಳದಂಗಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಶ್ರಾಂತ ಮುಖ್ಯ ಶಿಕ್ಷಕ ಮುನಿರಾಜ ರಂಜಾಳ ಕಾರ್ಯಕ್ರಮ ನಿರೂಪಿಸಿದರು.
ಬೆಳಿಗ್ಗೆ ಹಾಗೂ ಮಧ್ಯಾಹ್ನ ವಿವಿಧ ಧಾರ್ಮಿಕ ಕಾರ್ಯಕ್ರಮ, ತೋರಣ ಮುಹೂರ್ತ ನಡೆಯಿತು.ಸಭಾ ಕಾರ್ಯಕ್ರಮದ ನಂತರ ಬಾಹುಬಲಿ ಮೂರ್ತಿಗೆ ಅಭಿಷೇಕ ಜರಗಿತು.