


ಬೆಳ್ತಂಗಡಿ: ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಏಕಗವಾಕ್ಷಿ ಪದ್ಧತಿ ತಂಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಏ.2ರಂದು ಆತ್ಮಹತ್ಯೆಗೆ ಯತ್ನಿಸಿದ್ದು, ಜಿಲ್ಲಾಸ್ಪತ್ರೆ ವೆನ್ಲಾಕ್ಗೆ ದಾಖಲಿಸಲಾಗಿದೆ.
ಶ್ರೀಧರ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. 2019ರಿಂದ ಅವರು ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮ ಪಂಚಾಯತ್ನಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆ ಜಾಗಕ್ಕೆ ಬೇರೊಬ್ಬ ಅಧಿಕಾರಿ ವರ್ಗಾವಣೆಯಾಗಿ ಬಂದ ಬಳಿಕ ಫೆಬ್ರವರಿಯಿಂದ ಶ್ರೀಧರ ಹೆಗಡೆ ಸ್ಥಳ ನಿರೀಕ್ಷಣೆಯಲ್ಲಿದ್ದರು.
ವೈಯಕ್ತಿಕ ಕಾರಣಗಳಿಂದಾಗಿ ಆತ್ಮಹತ್ಯೆಗೆ ಯತ್ನಿಸಿರುವ ಕುರಿತು ಮಾಹಿತಿ ಲಭಿಸಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯ ಸ್ಥಿರವಾಗಿದೆ. ಜಿಲ್ಲಾ ಪಂಚಾಯತ್ ಸಿಇಒ, ಅಪರ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ ಸಹಿತ ಹಲವು ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಪತ್ನಿ ಸಹಿತ ಕುಟುಂಬದವರ ಜತೆ ಜಿಲ್ಲಾ ಪಂಚಾಯತ್ ಸಿಇಒ ಡಾ.ಆನಂದ್ ಮಾತುಕತೆ ನಡೆಸಿದ್ದು, ಆತ್ಮಸ್ಥೈರ್ಯ ತುಂಬಿದ್ದಾರೆ.
ಶ್ರೀಧರ ಹೆಗಡೆಯವರ ಪತ್ನಿ ಜಯಂತಿ ಬೆಳ್ತಂಗಡಿಯಲ್ಲಿ ಸ್ಟಾಫ್ ನರ್ಸ್ ಆಗಿದ್ದು, ಗುರುವಾಯನಕೆರೆ ಸಮೀಪದ ಪಣೆಜಾಲು ಬಳಿ ದಂಪತಿ ನೆಲೆಸಿದ್ದಾರೆ.