ಬೆಳ್ತಂಗಡಿ: ಬೆಳ್ತಂಗಡಿಯ ಮಾಣಿಕ್ಯ ಮಾಜಿ ಶಾಸಕ ಕೆ.ವಸಂತ ಬಂಗೇರರ ನೆನಪಿನಲ್ಲಿ ನೇರ ನಡೆ ನುಡಿಯ ಸ್ವಾಭಿಮಾನಿ ನಾಯಕನಿಗೆ ಸಾವಿರದ ನುಡಿ ನಮನಗಳು ಕಾರ್ಯಕ್ರಮ ಮೇ 25ರಂದು ಬೆಳಗ್ಗೆ 9.30ರಿಂದ ಬೆಳ್ತಂಗಡಿ ಜೈನ್ ಪೇಟೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕಾಶಿಪಟ್ಣ ಹೇಳಿದರು.
ಅವರು ಮೇ 21ರಂದು ಸಂತೆಕಟ್ಟೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಭಾಗಿಯಾಗಲಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಚಿವರು, ಉಭಯ ಜಿಲ್ಲೆಯ ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
241 ಬೂತ್ಗಳಿಗೆ ಆಮಂತ್ರಣ ಪತ್ರ ತಲುಪಲಿದ್ದು, 5ರಿಂದ 7 ಸಾವಿರ ಮಂದಿ ಜನರು ಸೇರುವ ನಿರೀಕ್ಷೆಯಿದೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಕಾರ್ಯಕ್ರಮ ನಡೆಯಲಿದೆ. ಬಂಗೇರರ ಹಿತೈಷಿಗಳು, ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಮಹಿಳಾ ಗ್ರಾಮೀಣ ಸಮಿತಿ ಅಧ್ಯಕ್ಷೆ ವಂದನಾ ಭಂಡಾರಿ, ಬ್ಲಾಕ್ ಕಾಂಗ್ರೆಸ್ ಮಹಿಳಾ ನಗರ ಸಮಿತಿ ಅಧ್ಯಕ್ಷೆ ನಮಿತಾ ಕೆ.ಪೂಜಾರಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜೈಶನ್ ಪಟ್ಟೇರಿ, ಯೂತ್ ಕಾಂಗ್ರೆಸ್ ಅಧ್ಯಕ್ಷ ಸುರ್ದಶನ್ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯ ಶೇಖರ್ ಕುಕ್ಕೇಡಿ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ನಗರ ಅಧ್ಯಕ್ಷ ಕೆ.ಎಂ. ಅಬ್ದುಲ್ ಕರೀಮ್ ಗೇರುಕಟ್ಟೆ ಹಾಗೂ ಎಸ್ಸಿ ಘಟಕದ ಅಧ್ಯಕ್ಷ ನೇಮಿರಾಜ್ ಕಿಲ್ಲೂರು ಉಪಸ್ಥಿತರಿದ್ದರು. ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ ಹೊಸಂಗಡಿ ಸ್ವಾಗತಿಸಿ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ವಂದಿಸಿದರು.