ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಜೂ.14ರಂದು ಹಮ್ಮಿಕೊಳ್ಳಲಾಯಿತು.
ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಬಲವರ್ಧನೆಗೆ ಪೂರಕವಾಗಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಂತೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ನಡೆಯುವ ಈ ಉಚಿತ ಬರವಣಿಗೆ ಪುಸ್ತಕಗಳ ವಿತರಣಾ ಕಾರ್ಯಕ್ರಮನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ.ಎಸ್ ನೆರವೇರಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಯಾಗಿರುವ ಧನ್ಯಕುಮಾರ್ ಮತ್ತು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ರವರು ಉಪಸ್ಥಿತರಿದ್ದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ವಹಿಸಿಕೊಂಡಿದ್ದರು.
ಉಚಿತ ಬರವಣಿಗೆ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದ ಡಾ.ಎಸ್.ಸತೀಶ್ಚಂದ್ರ ರವರು ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಗ್ರಾಮೀಣ ಶಾಲೆಗಳಿಗೆ ಅನೇಕ ಸವಲತ್ತುಗಳನ್ನು ನೀಡುತ್ತಾ ಬಂದಿರುತ್ತಾರೆ. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಜೀವನ ಶಿಕ್ಷಣ ನೀಡುವುದೇ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮೂಲ ಉದ್ದೇಶ.ಈ ವರ್ಷ ಎಸ್.ಎಸ್.ಎಲ್.ಸಿ ಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಶಾಲೆಗಳ ಮಕ್ಕಳು ಉತ್ತಮ ಸಾಧನೆಯನ್ನು ಮಾಡಿದ್ದಾರೆ.ಗುಣಮಟ್ಟದ ಶಿಕ್ಷಣ ನೀಡುವುದಕ್ಕೆ ಹೆಚ್ಚಿನ ಒತ್ತು ನೀಡಬೇಕು.ಇಡೀ ಸಮುದಾಯವೇ ಶಾಲೆಯತ್ತ ಬರುವಂತಹ ಶಾಲೆಯಾಗಬೇಕು ಎಂದು ಅಭಿಪ್ರಾಯ ಪಟ್ಟರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಧನ್ಯ ಕುಮಾರ್ ರವರು ಪ್ರಾಥಮಿಕ ಶಾಲೆಯ ಮಕ್ಕಳು ಮುಗ್ದ ಮನಸ್ಸಿನ ಮಕ್ಕಳು ಈ ಮಕ್ಕಳಿಗೆ ಆರಂಭದಿಂದಲೇ ಉತ್ತಮ ಶಿಕ್ಷಣ ದೊರೆತಾಗ ಮುಂದೊಂದು ದಿನ ಸಮಾಜದಲ್ಲಿ ಉತ್ತಮ ಪ್ರಜೆಯಾಗುತ್ತಾರೆ ಎಂದು ತಿಳಿಸಿದರು.
ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡ ಈ ಒಂದು ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ರವರು ಧನ್ಯವಾದಿಸಿ, ಶಾಲಾ ಶಿಕ್ಷಕಿ ಪುಷ್ಪಲತಾ ರವರು ನಿರೂಪಿಸಿದರು.