






ಬೆಳ್ತಂಗಡಿ: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ನಲ್ಲಿ ಜ. 10ರಂದು ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಮೆಕ್ಕೆಜೋಳ ಲೋಡ್ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗಲಿ ಭಾರೀ ಅನಾಹುತ ಸಂಭವಿಸಿದೆ. ಜಾವಗಲ್ನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಲಾರಿಗೆ ತಾಂತ್ರಿಕ ಅಡಚಣೆಯಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.



ಲಾರಿಯ ಟಯರ್ ಭಾಗದಿಂದ ಆರಂಭವಾದ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಲಾರಿಗೆ ವ್ಯಾಪಿಸಿ ಲಾರಿಯಲ್ಲಿದ್ದ ಮೆಕ್ಕೆಜೋಳ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಲಾರಿಯೂ ಸಹ ಬೆಂಕಿಗೆ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಬೆಂಕಿಯ ತೀವ್ರತೆಯಿಂದ ಘಾಟ್ನ ಅರಣ್ಯ ಪ್ರದೇಶಕ್ಕೂ ಅಗ್ನಿ ವ್ಯಾಪಿಸಿದ್ದು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಘಟನೆ ವೇಳೆ ಲಾರಿಯಲ್ಲಿದ್ದ ಚಾಲಕ ಸೇರಿದಂತೆ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದು, ಹೆಚ್ಚಿನ ಅನಾಹುತ ತಪ್ಪಿಸಲಾಗಿದೆ. ಘಟನೆ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.









