






ಕಳೆಂಜ: ಗ್ರಾಮೀಣ ಪ್ರದೇಶದಲ್ಲಿ ಪ್ಲಾಸ್ಟಿಕ್ ತ್ಯಾಜ್ಯದ ಸಮರ್ಪಕ ನಿರ್ವಹಣೆ ಹಾಗೂ ಪರಿಸರ ಸಂರಕ್ಷಣೆಯ ಉದ್ದೇಶದಿಂದ ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ಜೂನ್ 24ರಂದು ಪೂರ್ವಾಹ್ನ ವಿಶೇಷ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು.
ಕಳೆಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯರ್ತಡ್ಕ ಪೇಟೆ, ಪಾದೆ ಜಂಕ್ಷನ್ ಹಾಗೂ ಕಾಯರ್ತಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಠಾರಗಳಲ್ಲಿ ನಡೆದ ಸ್ವಚ್ಛತಾ ಕಾರ್ಯದಲ್ಲಿ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡರು. ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ, ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಕಾರ್ಯ ನಡೆಸಲಾಯಿತು.


ಅಭಿಯಾನದಲ್ಲಿ ಪಂಚಾಯತ್ ಮಾಜಿ ಉಪಾಧ್ಯಕ್ಷ ಮಂಜುನಾಥ್ ಗೌಡ ಹಾರಿತ್ತಕಜೆ, ಆಶಾ ಕಾರ್ಯಕರ್ತೆಯರು, ಕ್ರಿಶ್ಚಿಯನ್ ಬ್ರದರ್ಸ್ (ರಿ.) ಕಳೆಂಜದ ಸದಸ್ಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ಅಂಗಡಿ ಮಾಲಕರು ಮತ್ತು ಸಾರ್ವಜನಿಕರು ಭಾಗವಹಿಸಿ ಸ್ವಚ್ಛತಾ ಕಾರ್ಯಕ್ಕೆ ಸಹಕಾರ ನೀಡಿದರು.
ಗ್ರಾಮವನ್ನು ಸ್ವಚ್ಛ ಹಾಗೂ ಆರೋಗ್ಯಕರವಾಗಿಡುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳಿಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗಿದ್ದು, ಮುಂದೆಯೂ ಇದೇ ರೀತಿಯ ಸಹಕಾರ ನೀಡುವಂತೆ ಗ್ರಾಮ ಪಂಚಾಯತ್ ಮನವಿ ಮಾಡಿದೆ.









