ದ.ಕ. ಜಿಲ್ಲೆಯಲ್ಲಿ ಬರದ ಆತಂಕ: ಮುಂಜಾಗ್ರತಾ ಕ್ರಮಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

0

ಬೆಳ್ತಂಗಡಿ: ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆಯಿದ್ದು, ಸರ್ಕಾರ ಈಗಿನಿಂದಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಗ್ರಹಿಸಿದ್ದಾರೆ.

ಸುದ್ದಿ ಬಿಡುಗಡೆ ಜೊತೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ ಹಾಗೂ ಉಳ್ಳಾಲ ತಾಲೂಕುಗಳನ್ನು ರಾಜ್ಯ ಸರ್ಕಾರ ಮಧ್ಯಮ ಬರಪೀಡಿತ ತಾಲೂಕುಗಳೆಂದು ಘೋಷಿಸಿರುವುದನ್ನು ಸ್ವಾಗತಿಸಿ, ಮುಂದಿನ ಜನವರಿ, ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಬಳಿಕ ಕೃಷಿಕರಿಗೆ ನೀರಿನ ಅಭಾವ ಎದುರಾಗುವ ಸಾಧ್ಯತೆ ಇದೆ. ಅದೇ ರೀತಿ ಕುಡಿಯುವ ನೀರಿನ ಸಮಸ್ಯೆಯೂ ತಲೆದೋರುವ ಸಾಧ್ಯತೆ ಇರುವುದರಿಂದ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ನೀರಿನ ಸಮಸ್ಯೆ ಎದುರಾಗುವ ಮುನ್ನವೇ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ಕರೆದು, ತಾಲೂಕು ಹಾಗೂ ಜಿಲ್ಲೆಯ ಪರಿಸ್ಥಿತಿಗೆ ಪೂರಕವಾದ ಸಮಗ್ರ ಯೋಜನೆ ರೂಪಿಸಬೇಕು ಎಂದು ಶಾಸಕರು ಒತ್ತಾಯಿಸಿದ್ದಾರೆ.ಜಿಲ್ಲೆಯ ವಿವಿಧ ಭಾಗಗಳಲ್ಲಿರುವ ಕಿಂಡಿ ಅಣೆಕಟ್ಟುಗಳಿಗೆ ತಕ್ಷಣ ಹಲಗೆಗಳನ್ನು ಅಳವಡಿಸುವ ಕಾರ್ಯ ಕೈಗೊಳ್ಳಬೇಕು. ಇದಕ್ಕಾಗಿ ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು, ಅಂತರ್ಜಲ ಮಟ್ಟ ಕುಸಿತದಿಂದ ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಪರಿಶೀಲಿಸಿ, ಅಗತ್ಯವಿರುವ ಕಡೆ ಪರ್ಯಾಯ ಕೊಳವೆ ಬಾವಿಗಳ ವ್ಯವಸ್ಥೆ ಕಲ್ಪಿಸಬೇಕು.

ಈ ಕಾರ್ಯಕ್ಕೆ ನೀರಾವರಿ ಅಭಿವೃದ್ಧಿ ಇಲಾಖೆಗಳು ಪೂರಕವಾಗಿ ಅನುದಾನ ಬಿಡುಗಡೆ ಮಾಡಬೇಕು ಎಂದು ಅವರು ಹೇಳಿದ್ದಾರೆ.ಮುಂದಿನ ದಿನಗಳಲ್ಲಿ ನೀರಿನ ಕೊರತೆಯಿಂದ ಕೃಷಿಗೆ ಹಾನಿಯಾದರೆ, ಅಂತಹ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು, ಬರ ಪರಿಸ್ಥಿತಿ ತೀವ್ರಗೊಳ್ಳುವವರೆಗೆ ಕಾಯದೆ, ನೀರಿನ ಲಭ್ಯತೆ, ಕೃಷಿ ಹಾಗೂ ಕುಡಿಯುವ ನೀರಿನ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈಗಿನಿಂದಲೇ ಸಿದ್ಧತೆ ಕೈಗೊಳ್ಳಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here