ಸಾಂಕ್ರಾಮಿಕ ರೋಗಗಳ ವಿರುದ್ಧ ಗ್ರಾಮ ಪಂಚಾಯಿತಿಗಳು ತಂಡವಾಗಿ ಹೋರಾಡಿ

  • ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗ್ರಾ.ಪಂ.ಗಳಿಗೆ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಭೀತಿಯ ನಡುವೆ ಡೆಂಘೆ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್‍ಗಳು ಅದರ ವಿರುದ್ಧ ಒಂದು ತಂಡವಾಗಿ ಹೋರಾಡಿದರೆ ಅದನ್ನು ತಡೆಗಟ್ಟಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಆಯ್ದ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿಡಿಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು ಡೆಂಘೆ, ಮಲೇರಿಯಾ ರೋಗಗಳು ವ್ಯಾಪಿಸದಂತೆ ಗ್ರಾ.ಪಂ.ಗಳು ಸ್ಥಳೀಯವಾಗಿ ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಬೆಟ್ಟಂಪಾಡಿ ಭಾಗದಲ್ಲಿ ಡೆಂಘೆ ಪ್ರಕರಣ ಹೆಚ್ಚು ಕಾಣಿಸಿರುವ ಮಾಹಿತಿ ತಿಳಿದು ಆ ಆ ಭಾಗದಲ್ಲಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಗ್ರಾಮ ಪಂಚಾಯಿತಿ ಸದಸ್ಯರ ಸಹಕಾರವಿರಲಿ:
ಕೆಲವೆಡೆ ದಿನಸಿ ಅಂಗಡಿಗಳಲ್ಲಿ ನಿಗದಿತ ದರಕ್ಕಿಂತ ಜಾಸ್ತಿ ದರ ವಿಧಿಸಿರುವ ಬಗ್ಗೆ ಸಾರ್ವಜನಿಕರ ದೂರುಗಳು ಬರುತ್ತಿವೆ. ಗ್ರಾಮ ಪಂಚಾಯತಿಗಳು ತಮ್ಮ ವ್ಯಾಪ್ತಿಯ ಅಂಗಡಿಗಳಲ್ಲಿ ಆಹಾರ ಸಾಮಾಗ್ರಿಗಳ ದರಗಳನ್ನು ಆಗಿಂದಾಗ್ಗೆ ಪರಿಶೀಲಿಸಬೇಕು. ಗ್ರಾಮ ಪಂಚಾಯಿತಿ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿ ನಡೆಯುವ ಆರೋಗ್ಯ ಸಮೀಕ್ಷಾ ಕಾರ್ಯಗಳಿಗೆ ಆಶಾ ಕಾರ್ಯಕರ್ತರೊಂದಿಗೆ ಸಹಕರಿಸಬೇಕು. 2 ನೇ ಹಂತದ ಸಮೀಕ್ಷೆ ನಡೆಯುತ್ತಿದ್ದು, ಇದು ಮಹತ್ವದ್ದಾಗಿದೆ. ಸಾರ್ವಜನಿಕರ ಚಲನವಲನಗಳ ಮಾಹಿತಿ ಅರಿತು, ಆರೋಗ್ಯ ಸಮೀಕ್ಷೆ ಯಶಸ್ವಿಗೊಳ್ಳಲು ಸಹಕರಿಸಬೇಕು ಎಂದು ಸಚಿವ ಕೋಟ ಸೂಚಿಸಿದರು.

ಕುಡಿಯುವ ನೀರಿಗೆ ಆದ್ಯತೆ ನೀಡಿ:
ಗ್ರಾಮ ಪಂಚಾಯತಿಗಳಲ್ಲಿ ಪಡಿತರ ವಿತರಣೆಯನ್ನು ಪರಿಶೀಲಿಸಿದ ಸಚಿವರು, ಏಪ್ರಿಲ್ ತಿಂಗಳಲ್ಲಿ ಪಡಿತರ ವಿತರಣೆ ಯಶಸ್ವಿಯಾಗಿ ನಡೆದಿದೆ. ಕಾರ್ಡ್ ಇಲ್ಲದವರಿಗೆ ಅಕ್ಕಿ ಕೊಡುವ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು. ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು ತಂಡವಾಗಿ ಕೆಲಸ ಮಾಡಿ ಸಾರ್ವಜನಿಕರಲ್ಲಿ ಆತ್ಮಸ್ಥೈರ್ಯ ತುಂಬಬೇಕು. ಗ್ರಾಮ ಪಂಚಾಯತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಜಾರಿಗೆ ತರಬೇಕು. ಕುಡಿಯುವ ನೀರಿನ ಅಗತ್ಯವಿರುವ ಕಡೆ ಕೊಳವೆ ಬಾವಿಗಳನ್ನು ಕೊರೆಯಲು ಅನುಮತಿ ನೀಡಲಾಗುತ್ತದೆ ಎಂದು ಸಚಿವರು ಹೇಳಿದರು.

ಕೊರೊನಾ ನಿರ್ವಹಣೆಗಾಗಿ ಪ್ರತಿ ಗ್ರಾಮ ಪಂಚಾಯತಿಗೆ 20,000 ರೂ. ಅನುದಾನ ನೀಡಲಾಗಿದೆ ಇದರಲ್ಲಿ ವಿವಿಧ ಜಾಗೃತಿ ಮೂಡಿಸುವ ಕಾರ್ಯವನ್ನು ಹಾಗೂ ಆಶಾ ಕಾರ್ಯಕರ್ತರಿಗೆ ಅಗತ್ಯ ಸಾಮಾಗ್ರಿಗಳನ್ನು ನೀಡಬಹುದಾಗಿದೆ. ಲಾಕ್‍ಡೌನ್ ಯಶಸ್ವಿಗೊಳಿಸಲು ಜನರ ಸಹಕಾರ ಅತ್ಯಗತ್ಯ, ಜನರು ಸ್ವಯಂ ಕಫ್ರ್ಯೂಗೊಳಗಾಗಿ, ಕೊರೊನಾ ಸಾಂಕ್ರಾಮಿಕ ತಡೆಗಟ್ಟಲು ಸಹಕರಿಸಬೇಕು ಎಂದು ತಿಳಿಸಿದರು.
ಈ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸಿಇಒ ಡಾ. ಸೆಲ್ವಮಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.