ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ಬಂಗಾರ ಪಳಿಕೆ ಬಡಮನೆ ಅಬ್ಬಿ ಫಾಲ್ಸ್ನಲ್ಲಿ ಗುಡ್ಡ ಕುಸಿತದಿಂದ ಉಜಿರೆಯ ವಿದ್ಯಾರ್ಥಿ ಸನತ್ ಶೆಟ್ಟಿ ರವರು ಮಣ್ಣಿನಡಿ ಸಿಲುಕಿರುವ ಘಟನೆ ನಡೆದು ಇಂದಿಗೆ(ಜ.30) ಐದು ದಿನಗಳಾಗಿದ್ದು, ಘಟನಾ ಸ್ಥಳಕ್ಕೆ ಮಾಜಿ ಶಾಸಕ ಕೆ ವಸಂತ ಬಂಗೇರರವರು ಜ.29 ರಂದು ಭೇಟಿ ನೀಡಿ ಕಾರ್ಯಾಚರಣೆಯ ಬಗ್ಗೆ ಮಾಹಿತಿ ಪಡೆದುಕೊಂಡರು.
ನಂತರ ಮಾತನಾಡಿದ ಅವರು ಜಿಲ್ಲಾ ಆಡಳಿತ ಶ್ರೀಘ್ರವೇ ಕ್ರಮಗಳನ್ನು ಕೈಗೊಂಡು ಆದಷ್ಟು ಬೇಗ ಕಾರ್ಯಾಚರಣೆ ನಡೆಸಿ ವಿದ್ಯಾರ್ಥಿ ಪತ್ತೆ ಕಾರ್ಯ ಮಾಡಬೇಕು. ಶೋಧ ಕಾರ್ಯಾಚರಣೆಯಲ್ಲಿ ಶ್ರಮಿಸುತ್ತಿರುವ ರಾಜ್ಯ ವಿಪತ್ತು ನಿರ್ವಹಣಾ ತಂಡ, ಅಗ್ನಿಶಾಮಕ ದಳ, ಪೊಲೀಸರು, ಅರಣ್ಯ, ಕಂದಾಯ ಸೇರಿದಂತೆ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ತಂಡ, ಸಂಘ-ಸಂಸ್ಥೆಯವರು ಸ್ಥಳೀಯರಿಗೆ, ಅಧಿಕಾರಿ ವರ್ಗದವರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ರಂಜನ್ ಜಿ ಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಭರತ್ ಕುಮಾರ್, ದಲಿತ ಸಂಘರ್ಷ ಸಮಿತಿ ಮುಖಂಡ ಚಂದು ಎಲ್, ವಸಂತ ಬಿ.ಕೆ, ಮಲವಂತಿಗೆ ಗ್ರಾ.ಪಂ ಮಾಜಿ ಅಧ್ಯಕ್ಷ ಮಹಮ್ಮದ್ ಮತ್ತಿತರರು ಉಪಸ್ಥಿತರಿದ್ದರು.