ಕಾಪಿನಡ್ಕ: ಇಲ್ಲಿಯ ಉದಯನಗರ ಗುಂಡೇರಿ ಬಳಿ ಕಾರು ಮತ್ತು ದ್ವಿಚಕ್ರ ವಾಹನದ ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿದ ಘಟನೆ ಫೆ.3 ರಂದು ನಡೆದಿದೆ. ಘಟನೆಯಿಂದಾಗಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ವಿವರ: ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ತೆರಳುತ್ತಿದ್ದ ಕಾರಿಗೆ ಲಾರಿಯನ್ನು ಓವರ್ಟೇಕ್ ಮಾಡುವ ಭರದಲ್ಲಿ ಅತೀ ವೇಗವಾಗಿ ಅಳದಂಗಡಿಯಿಂದ ಗುರುವಾಯನಕೆರೆ ಕಡೆಗೆ ಪ್ರಯಾಣಿಸುತ್ತಿದ್ದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು, ಕಾಲಿಗೆ ಗಂಭೀರ ಗಾಯಗಳಾಗಿದೆ.
ಸ್ಥಳೀಯರ ಸಹಾಯದಿಂದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ಮಾಡಲಾಯಿತು. ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿರುವುದಿಲ್ಲ. ಘಟನೆಯಿಂದ ಸ್ವಲ್ಪ ಸಮಯ ವಾಹನ ಸಂಚಾರ ಸ್ಥಗಿತಗೊಂಡಿತ್ತು.