ಬೆಳ್ತಂಗಡಿ: ಬೆಳ್ತಂಗಡಿ ವಿಧಾನಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಪರ ಮನೆ ಮನೆಗೆ ಭೇಟಿ ನೀಡಿ ಮತಯಾಚಿಸಿರುವ ಮತ್ತು ಬಿಜೆಪಿ, ವಿಜಯೋತ್ಸವದ ಮೆರವಣಿಗೆಯಲ್ಲಿ ಪಕ್ಷದ ಧ್ವಜ ಹಿಡಿದು ಭಾಗಿಯಾಗಿರುವ ಗ್ರಾಮ ಪಂಚಾಯತ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಸಾರ್ವಜನಿಕರು ದೂರು ನೀಡಿದ ಹಿನ್ನೆಲೆ ಉಜಿರೆ ಗ್ರಾಮ ಪಂಚಾಯತ್‌ನ ಸಿಬ್ಬಂದಿ ನಾಗೇಶ್ ಎಂಬವರು ವಿರುದ್ದ ಕ್ರಮ ಕೈಗೊಳ್ಳಲು ನೊಟೀಸ್ ಜಾರಿ ಮಾಡಿ ಆದೇಶ ಹೊರಡಿಸಿದೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿ.ಜೆ.ಪಿ ಅಭ್ಯರ್ಥಿ ಹರೀಶ್ ಪೂಂಜರವರ ಪರ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದಾರೆ. ಅಲ್ಲದೆ ಚುನಾವಣಾ ಫಲಿತಾಂಶ ಹಿಡಿದು ಉಜಿರೆ ಪೇಟೆಯಲ್ಲಿ ವಿಜಯೋತ್ಸವ ನಡೆಸಿದ್ದಾರೆ ಎಂದು ಉಜಿರೆಯ ಸಾರ್ವಜನಿಕರು ಹಲವರ ಸಹಿ ದಾಖಲಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿಗೆ ದೂರು ನೀಡಿದ್ದಾರೆ.
ಕರ್ನಾಟಕ ಪಂಚಾಯತ್ ರಾಜ್ ಅಡಿ ನಿಯಮದಂತೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಯಾವುದೇ ರಾಜಕೀಯ ಪಕ್ಷದ ಪರವಾಗಿ ಪ್ರಚಾರ ನಡೆಸುವುದು ಮತ್ತು ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದನ್ನು ನಿಷೇಧಿಸಲಾಗಿರುತ್ತದೆ. ಆದರೆ ನಾಗೇಶ್ ರವರು ಸದ್ರಿ ನಿಯಮಗಳನ್ನು ಉಲ್ಲಂಘಿಸಿ ಭಾರತೀಯ ಜನತಾ ಪಕ್ಷದ ಪರವಾಗಿ ಪ್ರಚಾರ ನಡೆಸಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಇವರನ್ನು ತಕ್ಷಣ ಕೆಲಸದಿಂದ ವಜಾಗೊಳಿಸಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿತ್ತು ಈ ಹಿನ್ನೆಲೆಯಲ್ಲಿ ನೊಟೀಸ್ ಜಾರಿ ಆದೇಶ ಹೊರಡಿಸಿದೆ.