‘10 ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ’ವಿಧಾನ ಪರಿಷತ್‌ನಲ್ಲಿ ಪ್ರತಾಪಸಿಂಹ ನಾಯಕ್ ಪ್ರಶ್ನೆಗೆ ಸಚಿವ ತಂಗಡಗಿ ಉತ್ತರ

0

ಬೆಳ್ತಂಗಡಿ: ದ.ಕ. ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 10 ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿದ್ದು, 18 ವಿದ್ಯಾರ್ಥಿನಿಲಯಗಳಿಗೆ ಅನುದಾನದ ಲಭ್ಯತೆಯುನುಸಾರ ಹಂತಹಂತವಾಗಿ ಸ್ವಂತ ಕಟ್ಟಡ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ ಎಸ್.ತಂಗಡಗಿ ತಿಳಿಸಿದ್ದಾರೆ.

ವಿಧಾನ ಪರಿಷತ್ ಅಧಿವೇಶನದಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್ ಅವರು ಜಿಲ್ಲೆಯ ಹಾಸ್ಟೆಲ್‌ಗಳ ಸ್ಥಿತಿಗಳ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದ್ದಾರೆ. ದ.ಕ.ಜಿಲ್ಲೆಯಲ್ಲಿ ಒಟ್ಟು 75 ವಿದ್ಯಾರ್ಥಿ ನಿಲಯಗಳು ಕಾರ್ಯ ನಿರ್ವಹಿಸುತ್ತಿದ್ದು ಅದರಲ್ಲಿ 42 ನಿಲಯಗಳು ಸ್ವಂತ ಕಟ್ಟಡದಲ್ಲಿ, 28 ನಿಲಯಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಸ್ವಂತ ಕಟ್ಟಡಗಳಲ್ಲಿರುವ ವಿದ್ಯಾರ್ಥಿ ನಿಲಯಗಳಿಗೆ ಮಂಜೂರಾತಿ ಸಂಖ್ಯೆಗನುಗುಣವಾಗಿ ಶೌಚಾಲಯ, ಸ್ನಾನಗೃಹ ಇತ್ಯಾದಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಎಲ್ಲಾ 75 ವಿದ್ಯಾರ್ಥಿ ನಿಲಯಗಳಲ್ಲಿನ ನಿಲಯಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯಗಳೊಂದಿಗೆ ಜಮಖಾನ, ಬೆಡ್‌ಶೀಟ್, ಲೇಖನ ಸಾಮಗ್ರಿ, ಶುಚಿ ಸಂಭ್ರಮ ಕಿಟ್, ಪ್ರೋತ್ಸಾಹ ಧನ, ಸ್ಪೋಕನ್ ಇಂಗ್ಲೀಷ್, ವ್ಯಕ್ತಿತ್ವ ವಿಕಸನ ತರಬೇತಿ, ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ಇತ್ಯಾದಿ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here