

ಬೆಳ್ತಂಗಡಿ: ಹನ್ನೊಂದು ವರ್ಷಗಳ ಹಿಂದೆ ಧರ್ಮಸ್ಥಳದ ಮಣ್ಣಸಂಕದಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿರುವ ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿನಿ ಕು.ಸೌಜನ್ಯ ಪ್ರಕರಣದ ತನಿಖೆಗೆ ನ್ಯಾಯಾಲಯದ ಸುಪರ್ದಿಯಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಸರಕಾರಕ್ಕೆ ಒತ್ತಾಯಿಸಿ , ಸೌಜನ್ಯ ಹೋರಾಟ ಸಮಿತಿ ಬಂದಾರು,ಮೊಗ್ರು ಕಣಿಯೂರು ವತಿಯಿಂದ ಬೃಹತ್ ಪ್ರತಿಭಟನಾ ಸಭೆ ನ.5 ರಂದು ಬಂದಾರಿನ ಪಾಣೆಕಲ್ಲುನಲ್ಲಿ ನಡೆಯುತ್ತಿದೆ.ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸಭೆಯಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು ಹಾಗೂ ಆರೋಪಿಗಳನ್ನು ರಕ್ಷಣೆ ಮಾಡಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಲಾಗಿದೆ.
ಕು.ಸೌಜನ್ಯರ ತಾಯಿ ಕುಸುಮಾವತಿ ಚಂದಪ್ಪ ಗೌಡ ಪಾಂಗಳ, ನಿವೃತ್ತ ಪೊಲೀಸ್ ಅಧಿಕಾರಿ ಗೀರಿಶ್ ಮಟ್ಟಣ್ಣನವರ್, ಸಾಮಾಜಿಕ ಹೋರಾಟಗಾರ್ತಿ ಪ್ರಸನ್ನರವಿ, ತುಳು ಸಂಸ್ಕೃತಿಯ ಚಿಂತಕ ತಮ್ಮಣ್ಣ ಶೆಟ್ಟಿ, ಮಂಗಳೂರಿನ ವಿದ್ಯಾರ್ಥಿ ಸೋಶಿಯಲ್ ಎಜುಕೇಶನ್ ಸೊಸೈಟಿಯ ಸ್ಥಾಪಕ ನಿರ್ದೇಶಕ ಶ್ರೀನಿವಾಸ್ ಎಮ್ ಎಸ್ ಮಿಜಾರು ,ಸೂರ್ಯ ನಾರಾಯಣ ಕುಡುಮತ್ತಾಯ ಬಂದಾರು, ಮೇದಾಪ್ಪ ಗೌಡ, ಸಮಿತಿಯ ಸಂಚಾಲಕ ತುಕಾರಾಮ ಗೌಡ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
