ಉಜಿರೆ : ಕನ್ನಡವನ್ನು ಕಲಿತು, ಅರಿತು ಮಾತಾಡಿದಾಗ ಮಾತ್ರ ಕನ್ನಡ ಭಾಷೆಯ ಅಭಿರುಚಿ, ಸೊಬಗು ಕಾಣಲು ಸಾಧ್ಯ ಎಂದು ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್ ಅಭಿಪ್ರಾಯಪಟ್ಟರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಆಯೋಜಿಸಿದ್ದ ‘ಎಂದೆಂದಿಗೂ ಕನ್ನಡ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಕನ್ನಡ ಹೆಚ್ಚು ಹೆಚ್ಚು ಬಳಸುವ ಮೂಲಕ ಭಾಷೆಯನ್ನು ಉಳಿಸಿ ಬೆಳೆಸಬೇಕಿದೆ. ಸಾಹಿತ್ಯಕ್ಕೆ ನೀಡುವ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿಗಳು ಹೆಚ್ಚು ಕನ್ನಡಕ್ಕೆ ಸಾಹಿತ್ಯಕ್ಕೆ ಒದಗಿ ಬಂದಿರುವುದು ಹೆಮ್ಮೆಯ ಸಂಗತಿ ಎಂದು ಸಂತೋಷ ವ್ಯಕ್ತಪಡಿಸಿದರು.
ಈ ಬಾರಿಯ ಕರ್ನಾಟಕ ಸರ್ಕಾರ ನೀಡುವ ರಾಜ್ಯೋತ್ಸವ ಪ್ರಶಸ್ತಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ಅವರಿಗೆ ಅರಸಿ ಬಂದಿರುವುದು ಅವರು ವೈದ್ಯಕೀಯ ಕ್ಷೇತ್ರಕ್ಕೆ ಸಲ್ಲಿಸಿದ ಸಾಧನೆಯ ಕೈಗನ್ನಡಿ ಎಂದು ಹೇಳಿದರು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮತ್ತು ಕಾಲೇಜು ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ಮಾತನಾಡಿದರು. ಪ್ರಶಸ್ತಿ ಸ್ವೀಕರಿಸಿದ ನಂತರ ವೈದ್ಯಕೀಯ ಕ್ಷೇತ್ರದಲ್ಲಿ ನನ್ನ ಜವಾಬ್ದಾರಿ ಹೆಚ್ಚಾಗಿದೆ. ನಾನು ಸಲ್ಲಿಸಿದ ಸೇವೆಗೆ ಸಾರ್ಥಕವಾಗಿದೆ. ಇದೆಲ್ಲಾ ಸಾಧ್ಯವಾಗಿದ್ದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಿಂದ ಎಂದು ಸ್ಮರಿಸಿದರು.
ಇದೇ ಸಂದರ್ಭದಲ್ಲಿ ಕಾಲೇಜು ಪ್ರಾಧ್ಯಾಪಕರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದೈಹಿಕ ಶಿಕ್ಷಕ ಧರ್ಮೇಂದ್ರ ನಿರೂಪಿಸಿ, ವಿದ್ಯಾರ್ಥಿ ಮಂಜುನಾಥ್ ವಂದಿಸಿದರು.
ಅದ್ದೂರಿ ಮೆರವಣಿಗೆ ಕಾರ್ಯಕ್ರಮ: ಕನ್ನಡದ ಕಲೆ, ಸಂಸ್ಕೃತಿ ಬಿಂಬಿಸುವ ಡೊಳ್ಳು ಕುಣಿತ, ವೀರಗಾಸೆ, ಹುಲಿಕುಣಿತ, ವಿದ್ಯಾರ್ಥಿನಿಯರ ಪೂರ್ಣಕುಂಭ ಮೇಳ ಮತ್ತು ಚಂಡೆಮದ್ದಳೆ ಸೇರಿದಂತೆ ಕನ್ನಡದ ತೇರು ನೋಡುಗರ ಗಮನ ಸೆಳೆಯುತ್ತಿತ್ತು. ತೆರೆದ ವಾಹನ ಮೆರವಣಿಗೆ ಮೂಲಕ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ ಸುರೇಂದ್ರ ಕುಮಾರ್ ಹಾಗೂ ಉಜಿರೆ ಶ್ರೀ ಧರ್ಮಸ್ಥಳ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಅವರನ್ನು ಕಾರ್ಯಕ್ರಮದ ವೇದಿಕೆಗೆ ಕರೆತರಲಾಯಿತು. ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.