ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಸಂಭ್ರಮದಿಂದ ಶಾಲಾ ಪ್ರಾರಂಭೋತ್ಸವ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯ ಪರಿಮಳ ಎಂ.ಬಿ ಹಾಗೂ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಜೊತೆ ಸೇರಿ ದೀಪ ಪ್ರಜ್ವಲಿಸಿ ಶಾಲಾ ಶೈಕ್ಷಣಿಕ ವರ್ಷದ ಮುಂದಿನ ಕಾರ್ಯಗಳಿಗೆ ಚಾಲನೆ ನೀಡಿದರು.
ಮಾತನಾಡಿದ ಅವರು ವಿದ್ಯಾರ್ಥಿಗಳ ಓದು ಹಾಗೂ ಚಟುವಟಿಕೆಗಳಿಗೆ ಆ ಭಗವಂತ ಶಕ್ತಿ ನೀಡಲಿ ಎಂದು ಹಾರೈಸಿದರು.
ಶಾಲಾ ಶಿಕ್ಷಕರಿಂದ ತಾವೇ ರಚಿಸಿದ ಹಾಡಿನ ಮುಖಾಂತರ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಸಹ ಶಿಕ್ಷಕಿ ಆಶಾ ಶಾಲೆಯಲ್ಲಿ ವಿದ್ಯಾರ್ಥಿಗಳು ಹೇಗಿರಬೇಕು ಎಂದು ವಿವರಿಸಿ ಶುಭ ಹಾರೈಸಿದರು.
2023-24ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು.ವಿವಿಧ ರೀತಿಯ ಚಟುವಟಿಕೆಗಳನ್ನು ಆಯೋಜಿಸಿದ್ದರು. ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಮೊದಲ ದಿನವೇ ವೇದಿಕೆಯನ್ನು ಕಲ್ಪಿಸಿಕೊಡಲಾಗಿತ್ತು.
ಒಟ್ಟಾರೆಯಾಗಿ ಶಾಲೆಯಲ್ಲಿ ಇಂದು ಹಬ್ಬದ ವಾತಾವರಣ ಮನೆ ಮಾಡಿತ್ತು. ವಿದ್ಯಾರ್ಥಿಗಳನ್ನು ಸಾಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಮನವಿ ಮಾಡಲಾಗಿತ್ತು. ಸಂಪ್ರದಾಯಿಕ ಉಡುಗೆಯೊಂದಿಗೆ ವಿದ್ಯಾರ್ಥಿಗಳು ರಾಷ್ಟ್ರಕವಿ ಕುವೆಂಪುರವರ ನುಡಿಯ ಸರ್ವ ಜನಾಂಗದ ಶಾಂತಿಯ ತೋಟದಂತೆ ಕಂಡುಬರುತ್ತಿದ್ದರು. ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಣ ಸಂಸ್ಥೆಯ ವತಿಯಿಂದ ಸಿಹಿತಿಂಡಿಯನ್ನು ವಿತರಿಸಲಾಯಿತು.