ಬೆಳ್ತಂಗಡಿ: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲಿಯೇ ಕರ್ನಾಟಕ ಸರಕಾರದಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆ ಗೋಚರಿಸುತ್ತಿದೆ.
ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸರಕಾರದ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಸಲು ಮುಂದಾಗಿದ್ದಾರೆ. ಜೂನ್ 7ರಂದು ಬೆಂಗಳೂರಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿಯವರು ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ.
ಜೂನ್ 8ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿಯಲ್ಲಿ ನಡೆಯುತ್ತಿರುವ ಎಐಸಿಸಿ ಸಭೆಗೆ ಕರೆಸಿಕೊಂಡಿರುವ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ವರಿಷ್ಠೆ ಸೋನಿಯಾಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ರಾಜ್ಯ ಸಚಿವ ಸಂಪುಟದ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಹಲವು ಸಚಿವರ ತಲೆದಂಡವಾಗುವ ಸಾಧ್ಯತೆಗಳಿದ್ದು ದಕ್ಷಿಣ ಕನ್ನಡಕ್ಕೆ ಸಂಬಂಧಿಸಿಯೂ ಬದಲಾವಣೆಯಾಗುವ ಸಾಧ್ಯತೆ ಇದೆ. ಹಾಲಿ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಮತ್ತೆ ಸಚಿವ ಸ್ಥಾನ ಕೊಡುವ ನಿರೀಕ್ಷೆ ಇದ್ದು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸ್ಪೀಕರ್ ಹುದ್ದೆಗೆ ನೇಮಕ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.