Site icon Suddi Belthangady

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಶ್ರೀರಾಮ ವಿದ್ಯಾಸಂಸ್ಥೆ ಪಟ್ಟೂರು, ಶ್ರೀ ವಿಷ್ಣುಮೂರ್ತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಟ್ಟೂರು, ಶ್ರೀರಾಮ ಪ್ರೌಢಶಾಲೆ ಪಟ್ಟೂರು ಇದರ ಸಂಯುಕ್ತ ಆಶ್ರಯದಲ್ಲಿ ಡಾlಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಡಾlಹೇಮಾವತಿ ವಿ.ಹೆಗ್ಗಡೆಯವರ ಆಶೀರ್ವಾದಗಳೊಂದಿಗೆ ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಈ ವಿಷಯದ ಕುರಿತಂತೆ ದುಶ್ಚಟ ದುರಭ್ಯಾಸದಿಂದ ಆಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಹಾಗೂ ಅರಿವು ಮೂಡಿಸುವ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ ನಡೆಯಿತು.

ವಿದ್ಯಾಸಂಸ್ಥೆಯ ಸಂಚಾಲಕ ಪ್ರಶಾಂತ್ ಶೆಟ್ಟಿ ದೇರಾಜೆ ಕಾರ್ಯಕ್ರಮ ಉದ್ಘಾಟಿಸಿದರು. ಕೊಕ್ಕಡ ವಲಯದ ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಶೇಷಪ್ಪ ಮೂಲ್ಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಆರೋಗ್ಯವಂತ ಶರೀರ ಆತ್ಮದ ಅರಮನೆ:
ಸಂಪನ್ಮೂಲ ವ್ಯಕ್ತಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ನಂದಕುಮಾರ್ ಪಿ. ಪಿ. ಮಾತನಾಡಿ, ಮಾದಕ ವ್ಯಸನವೆಂಬುದೊಂದು ರೋಗ. ಪ್ರಪಂಚದಲ್ಲಿ ಭೀಕರವಾದ ಖಾಯಿಲೆಗಳಲ್ಲಿ ಮಾದಕ ವ್ಯಸನವೂ ಒಂದು. ವಿದ್ಯಾರ್ಥಿ ಜೀವನ ಹಸಿ ಮಣ್ಣಿನ ಮಡಿಕೆ ಇದ್ದ ಹಾಗೆ. ಹದಿಹರೆಯದಲ್ಲಿ ತಂದೆ – ತಾಯಂದಿರ ಒತ್ತಡ, ಸ್ನೇಹಿತರ ಒತ್ತಡ, ಜೀವನ ಶೈಲಿ, ಮಾಧ್ಯಮ, ಆರ್ಥಿಕ ಸ್ವಾತಂತ್ರ್ಯ, ಪ್ರೀತಿಯ ಕೊರತೆ, ಅನಾರೋಗ್ಯ, ಪಾಶ್ಚಾತ್ಯ ಸಂಸ್ಕೃತಿ ನಕಾರಾತ್ಮಕ ಚಿಂತನೆಗಳು, ಈ ಎಲ್ಲಾ ಕಾರಣಗಳಿಂದಾಗಿ ಅಮಲು ಪದಾರ್ಥ ಹಾಗೂ ಇನ್ನಿತರ ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆಗಳಿವೆ.

ಅತಿಯಾದ ಮೊಬೈಲ್ ಬಳಕೆ ಮತ್ತು ಸಾಮಾಜಿಕ ಜಾಲತಾಣ ದಿಂದಲೂ ವಿದ್ಯಾರ್ಥಿಗಳ ಮನೋಸ್ಥಿತಿ ಹಾಳಾಗುತ್ತದೆ.

ವಿದ್ಯಾರ್ಥಿಗಳು ಇದರ ಬಗ್ಗೆಯೂ ಗಮನ, ರಚನಾತ್ಮಕ ಚಿಂತನೆ, ಧನಾತ್ಮಕ ಚಿಂತನೆ, ಕರ್ತವ್ಯ ಪ್ರಜ್ಞೆ, ಮತ್ತು ಪ್ರೀತಿ ವಿಶ್ವಾಸಗಳಿಂದ ಮಾತ್ರ ವ್ಯಸನ ಮುಕ್ತ ಜೀವನವನ್ನು ನಡೆಸಲು ಸಾಧ್ಯ.

ಆರೋಗ್ಯವಂತ ಶರೀರವೇ ಆತ್ಮದ ಅರಮನೆ. ಅನಾರೋಗ್ಯವಂತ ಶರೀರವೇ ಆತ್ಮದ ಸೆರೆಮನೆ. ಆರೋಗ್ಯಪೂರ್ಣ ಸಮಾಜ ಅಥವಾ ದುಶ್ಚಟಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ ಎಂದು ತಿಳಿಸಿದರು.

ಮುಖ್ಯೋಪಾಧ್ಯಾಯ ಚಂದ್ರಶೇಖರ್ ಶೇಟ್, ಕೊಕ್ಕಡ ವಲಯದ ಮೇಲ್ವಿಚಾರಕರಾದ ಭಾಗೀರಥಿ ಹಾಗೂ ಸೇವಾಪ್ರತಿನಿಧಿ ಹಾಗೂ ಸದಾಶಿವ ಉಪಸ್ಥಿತರಿದ್ದರು.

Exit mobile version