Site icon Suddi Belthangady

ಅ.೨೧: ವಿಧಾನ ಪರಿಷತ್ ಉಪ ಚುನಾವಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಚುನಾವಣಾ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನೂತನ ಸದಸ್ಯರ ಆಯ್ಕೆಗಾಗಿ ಅ.೨೧ರಂದು ಉಪ ಚುನಾವಣೆ ನಿಗದಿಯಾಗಿದೆ. ಚುನಾವಣಾ ನೀತಿ ಸಂಹಿತೆ ಸೆ.೧೯ರಿಂದಲೇ ಜಾರಿಯಾಗಿದೆ. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಚುನಾವಣಾ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿಯವರು ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾಗಿದ್ದರಿಂದ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದಾಗಿ ತೆರವಾಗಿರುವ ಪರಿಷತ್ ಸದಸ್ಯ ಸ್ಥಾನಕ್ಕೆ ಇದೀಗ ಉಪಚುನಾವಣೆ ನಿಗದಿಯಾಗಿದೆ.
ಸೆ.೨೬ರಂದು ಅಧಿಸೂಚನೆ ಪ್ರಕಟ: ಉಪಚುನಾವಣೆಗೆ ಸಂಬಂಧಿಸಿ ಸೆ.೨೬ರಂದು ಅಧಿಸೂಚನೆ ಪ್ರಕಟವಾಗಲಿದ್ದು ಅಂದೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಅ.೩ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ಅ.೪ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಅ.೭ರಂದು ಕೊನೆಯ ದಿನವಾಗಿದೆ. ಅ.೨೧ರಂದು ಬೆಳಗ್ಗೆ ೮ರಿಂದ ಸಂಜೆ ೪ ಗಂಟೆಯವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಟ್ಟು ೩೯೨ ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅ.೨೪ರಂದು ಮತ ಎಣಿಕೆ ನಡೆಯಲಿದೆ. ಅ.೨೮ರವರೆಗೆ ಅಧಿಸೂಚನೆಯ ಪ್ರಕ್ರಿಯೆ ಇರುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ರಾಜೀನಾಮೆ ನೀಡಿದ್ದ ಕೋಟ: ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೋಟ ಶ್ರೀನಿವಾಸ ಪೂಜಾರಿಯವರು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಗಡೆಯವರ ವಿರುದ್ಧ ಗೆಲುವು ಸಾಧಿಸಿದ್ದರು. ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವಧಿ ೫/೧/೨೦೨೮ರ ತನಕ ಇದ್ದರೂ ಅವರು ಸಂಸತ್ ಸದಸ್ಯರಾಗಿ ಚುನಾಯಿತರಾದ ಹಿನ್ನೆಲೆಯಲ್ಲಿ ಜೂ.೨೪ರಂದು ತನ್ನ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದಾಗಿ ಉಪ ಚುನಾವಣೆ ನಡೆಯಲಿದೆ.
ನೀತಿ ಸಂಹಿತೆ ಜಾರಿ: ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾದ ಸೆ.೧೯ರಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು ಅ.೨೮ರ ತನಕ ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ಹೊಸ ಯೋಜನೆ, ಕಾರ್ಯಕ್ರಮ ನೀತಿಯನ್ನು ಪ್ರಕಟಿಸುವಂತಿಲ್ಲ ಎಂದು ಚುನಾವಣಾಧಿಕಾರಿಯೂ ಆಗಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಕಳೆದ ಮಾರ್ಚ್ ತಿಂಗಳಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಸುಮಾರು ೩ ತಿಂಗಳ ಕಾಲ ನೀತಿ ಸಂಹಿತೆ ಜಾರಿಯಲ್ಲಿತ್ತು. ಅದಾದ ಬಳಿಕ ವಿಧಾನ ಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾದ ಬಳಿಕ ಮತ್ತೆ ನೀತಿ ಸಂಹಿತೆ ಜಾರಿಯಾಗಿತ್ತು. ಇದೀಗ ಮತ್ತೆ ವಿಧಾನ ಪರಿಷತ್ ಉಪಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದೆ.

ಅಚ್ಚರಿಯ ಆಯ್ಕೆ ಸಾಧ್ಯತೆ
ವಿಧಾನ ಪರಿಷತ್ ಉಪಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ಹಲವರ ಹೆಸರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಎರಡೂ ಪಕ್ಷಗಳಲ್ಲಿ ಅಚ್ಚರಿಯ ಅಭ್ಯರ್ಥಿಯ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಿಜೆಪಿಯಲ್ಲಿ ಮಾಜಿ ರಾಜ್ಯಾಧ್ಯಕ್ಷರಾಗಿರುವ ನಿಕಟಪೂರ್ವ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿಯ ಬಿಜೆಪಿ ನಾಯಕ ಉದಯ ಕುಮಾರ್ ಶೆಟ್ಟಿಯವರ ಹೆಸರು ಮೊದಲ ಸಾಲಿನಲ್ಲಿ ಕಾಣಿಸಿಕೊಂಡಿದ್ದರೆ ಕಾಂಗ್ರೆಸ್‌ನಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಮತ್ತು ಬೆಳ್ಳಿಪ್ಪಾಡಿ ರಮಾನಾಥ ರೈ ಮುಂತಾದವರ ಹೆಸರು ಪ್ರಚಲಿತದಲ್ಲಿದೆ. ಆದರೆ ಯಾರ ಹೆಸರೂ ಅಂತಿಮಗೊಂಡಿಲ್ಲ. ಕೊನೇಯ ಕ್ಷಣದಲ್ಲಿ ಉಭಯ ಪಕ್ಷದಲ್ಲಿಯೂ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೂ ಆಶ್ಚರ್ಯ ಇಲ್ಲ ಎಂದು ಚರ್ಚೆ ನಡೆಯುತ್ತಿದೆ.

೬೦೩೭ ಮತದಾರರು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯನ್ನೂ ಒಳಗೊಂಡಿರುವ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯ ದ.ಕ.ಸ್ಥಳೀಯ ಪ್ರಾಧಿಕಾರದ ಚುನಾವಣಾ ಕ್ಷೇತ್ರದ ವಿಧಾನ ಪರಿಷತ್‌ಗೆ ನಡೆಯಲಿರುವ ಈ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ನಗರ ಪಂಚಾಯತ್, ನಗರಸಭೆ, ಮಹಾನಗರ ಪಾಲಿಕೆಯ ಚುನಾಯಿತ ಸದಸ್ಯರು ಹಾಗೂ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಲೋಕಸಭಾ ಸದಸ್ಯರು ಮತದಾರರಾಗಿರುತ್ತಾರೆ. ತಾ.ಪಂ. ಮತ್ತು ಜಿ.ಪಂ. ಸದಸ್ಯರೂ ಈ ಚುನಾವಣೆಯ ಮತದಾರರಾಗಿದ್ದರೂ ಅವರ ಅಧಿಕಾರದ ಅವಧಿ ಈಗಾಗಲೇ ಮುಕ್ತಾಯಗೊಂಡು ವರ್ಷಗಳೇ ಕಳೆದರೂ ಇನ್ನೂ ನೂತನ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯದೇ ಇರುವುದರಿಂದ ಈ ಉಪ ಚುನಾವಣೆಯಲ್ಲಿ ಜಿ.ಪಂ. ಮತ್ತು ತಾ.ಪಂ.ಸದಸ್ಯರ ಮತಗಳು ಇರುವುದಿಲ್ಲ.

Exit mobile version