Site icon Suddi Belthangady

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ- ಕುತ್ಲೂರು ಸ.ಹಿ.ಪ್ರಾ. ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

ಮಂಗಳೂರು: ಗ್ರಾಮೀಣ ಭಾಗದ ಜನರ ಸಮಸ್ಯೆಗಳ ಬಗ್ಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಪರಿಗಣಿಸಲ್ಪಟ್ಟ ಮಾಧ್ಯಮ ರಂಗದ ಪ್ರತಿನಿಧಿಗಳು ಗಮನ ಹರಿಸಿ, ನಿವಾರಣೆಗೆ ನಿರಂತರವಾಗಿ ಪ್ರಯತ್ನಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಅವರು ಅ.28ರಂದು ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಎಂಸಿಎಫ್ ಸಂಸ್ಥೆಯ ಸಿಎಸ್‌ಆರ್ ನಿಧಿಯ ಮೂಲಕ ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿದರು.

ಮಾಧ್ಯಮಗಳು ಜನರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವುದರ ಜೊತೆ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತ, ಸ್ಥಳೀಯ ಜನರ ಜೊತೆ ಸೇರಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಗ್ರಾಮೀಣ ಭಾಗದಲ್ಲಿ ನಡೆಸುತ್ತಿರುವ ಗ್ರಾಮ ವಾಸ್ತವ್ಯದ ಮೂಲಕ ಅವರ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಿರುವುದು ಮತ್ತು ಆ ಸಮಸ್ಯೆ ಪರಿಹರಿಸಲು ಗ್ರಾಮದ ಜನರು ಜೊತೆ ಸೇರಿ ಮಾಡುತ್ತಿರುವ ಕೆಲಸ ನಾನು ಇತರ ಕಡೆ ನೋಡಿಲ್ಲ‌. ಇದು ಜಿಲ್ಲೆಯ ಅಭಿವೃದ್ಧಿಗೆ ಪೂರಕ ಎಂದರು.

ಎಂಸಿಎಫ್‌ನ ಚೀಫ್ ಪ್ರೊಡಕ್ಷನ್ ಆಫೀಸರ್ ಗಿರೀಶ್ ಮಾತನಾಡಿ, ಕುತ್ಲೂರು ಗ್ರಾಮಾಂತರ ಪ್ರದೇಶ ಸೇರಿದಂತೆ ಸಂಸ್ಥೆಯ ಸಿಎಸ್‌ಆರ್ ನಿಧಿಯ ವತಿಯಿಂದ ಸುಮಾರು 350 ಮಕ್ಕಳಿಗೆ ಈ ಬಾರಿ ಸಮವಸ್ತ್ರ ನೀಡಲಾಗುತ್ತಿದೆ ಎಂದು ತಿಳಿಸಿದರು.

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಎಂಸಿಫ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಅವಿನಂದನ್, ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಮಚಂದ್ರ ಭಟ್ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ನಿರೂಪಿಸಿ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

ಪ್ರವಾಸೋದ್ಯಮ ರಾಷ್ಟ್ರ ಪ್ರಶಸ್ತಿ ಗೆದ್ದ ಕುತ್ಲೂರು ಗ್ರಾಮದ ಪ್ರತಿನಿಧಿಗೆ ಸನ್ಮಾನ: ರಾಷ್ಟ್ರಮಟ್ಟದ ಅತ್ಯುತ್ತಮ ಸಾಹಸ ಪ್ರವಾಸಿ ತಾಣ ಪ್ರಶಸ್ತಿ ಗೆದ್ದ ಕುತ್ಲೂರು ಗ್ರಾಮದ ಪ್ರತಿನಿಧಿ, ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಹರೀಶ್ ಡಾಕಯ್ಯ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಸನ್ಮಾನಿಸಿ, ಗೌರವಿಸಿದರು. ಗ್ರಾಮಸ್ಥರಾದ ಸುಂದರ್ ಕೋಟ್ಯಾನ್, ಸಂತೋಷ್ ಮೆಲ್ವಿನ್, ಸುಧಾಕರ, ಶಿಕ್ಷಕರಾದ ರಾಜು ಕಳಸಪ್ಪನವರ್, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಶ್ವೇತಾ, ಶಾಲಾ ಮಕ್ಕಳು ಭಾಗವಹಿಸಿದ್ದರು.

Exit mobile version