ಉಜಿರೆ: ನ. 25 ರಂದು “ವೀರೇಂದ್ರ ಹೆಗ್ಗಡೆಯವರು ಮಹಿಳೆಯರಿಗೆ ಸ್ವಾವಲಂಬಿಯಾಗಿ ಬದುಕಲು ದಾರಿ ತೋರಿದ ಮಹಾಚೈತನ್ಯ” ಎಂದು ಉಜಿರೆಯ ಶ್ರೀ ರತ್ನಮಾನಸ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಕೆ. ಯತೀಶ್ ಬಣ್ಣಿಸಿದರು. ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ.)ಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಡಿ. ವೀರೇಂದ್ರ ಹೆಗ್ಗಡೆಯವರ 77ನೇ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು.
ಡಿ. ವೀರೇಂದ್ರ ಹೆಗ್ಗಡೆಯವರು ಗ್ರಾಮೀಣ ಭಾಗದ ಬಡ, ಮಧ್ಯಮ ವರ್ಗದ ಜನರ ಆರ್ಥಿಕ ಶಕ್ತಿಯನ್ನು ಬಲಪಡಿಸುವ ಉದ್ದೇಶದಿಂದ ಹಮ್ಮಿಕೊಂಡ ಅನೇಕ ಕಾರ್ಯಕ್ರಮಗಳಿಂದ ಮಹಿಳೆಯರು ಆರ್ಥಿಕವಾಗಿ ಮುಂದುವರಿದಿದ್ದಾರೆ. ತಮ್ಮ ಗಂಡನ ಆರ್ಥಿಕ ಸಂಕಷ್ಟ ನಿವಾರಿಸುವಲ್ಲಿ ಬೆನ್ನೆಲುಬಾಗಿ ನಿಂತ ಪರಿಣಾಮ ಮಕ್ಕಳ ವಿದ್ಯಾಭ್ಯಾಸ ಉತ್ತಮಗೊಂಡಿದೆ” ಎಂದು ಅವರು ಹೇಳಿದರು.
ಸಂಸ್ಥೆಯ ವಿದ್ಯಾರ್ಥಿನಿಯರಾದ ಮಧುರ ಹಾಗೂ ಸೌಜನ್ಯ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಿಗೆ ಹೆಗ್ಗಡೆ ಅವರ ಕುರಿತು ಭಾಷಣ, ರಸಪ್ರಶ್ನೆ, ಭಾವಚಿತ್ರ ರಚನೆ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಲಾವಣ್ಯ ಕಾರ್ಯಕ್ರಮ ನಿರ್ವಹಿಸಿದರು.