ಬೆಳ್ತಂಗಡಿ: ಕಡಬ ತಾಲೂಕು ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಶೀಘ್ರ ಬಂಧನ ಮಾಡಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಬೆಳ್ತಂಗಡಿ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಡಿ.7ರಂದು ಮನವಿ ಸಲ್ಲಿಸಲಾಯಿತು.
ಡಿ.6 ರಂದು ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಗ್ರಾಮದ ಸ.ನಂ 123/1 ರ ಸರಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ತೆರಳಿದ ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯಾದ ಸಿದ್ದಲಿಂಗ ಜಂಗಮಶೆಟ್ಟಿ ರವರ ಮೇಲೆ ಜಮೀನು ಅತಿಕ್ರಮಣದಾರರಾದ ರೇಣುಕಾ ಕೋಂ ವಿಶ್ವನಾಥ ಎಂಬುವವರ ತಂದೆ ಮುತ್ತುಸ್ವಾಮಿ ಮತ್ತು ಇತರರು ಸೇರಿ ಹಲ್ಲೆ ಮಾಡಿರುತ್ತಾರೆ.
ಈ ಘಟನೆಯನ್ನು ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘ ವತಿಯಿಂದ ತೀವ್ರವಾಗಿ ಖಂಡಿಸುತ್ತೇವೆ. ಈ ಘಟನೆಯಿಂದ ಕ್ಷೇತ್ರಮಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಮನೋಸ್ಥೆರ್ಯ ಕುಂದಿದ್ದು, ಕ್ಷೇತ್ರಮಟ್ಟದಲ್ಲಿ ಭಯದಿಂದಲೇ ಕರ್ತವ್ಯ ನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ. ಆದ್ದರಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳಾದ ಮುತ್ತುಸ್ವಾಮಿ ಮತ್ತು ಇತರರನ್ನು ಕೂಡಲೇ ಬಂಧಿಸುವಂತೆ ಸಂಬಂಧಪಟ್ಟ ಇಲಾಖೆಗೆ ನಿರ್ದೇಶಿಸುವಂತೆ ಹಾಗೂ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಭಯ ಮುಕ್ತ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಡಿ.8ರೊಳಗೆ ಆರೋಪಿತರ ಬಂಧನವಾಗದೇ ಇದ್ದಲ್ಲಿ ಡಿ.9ರಿಂದ ತಾಲೂಕಿನ ಸಮಸ್ತ ಗ್ರಾಮ ಆಡಳಿತ ಅಧಿಕಾರಿಗಳು ಲೇಖನಿ ಸ್ಥಗಿತ ಹೋರಾಟಕ್ಕೆ ಇಳಿಯಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಬಹುದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.