Site icon Suddi Belthangady

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಂದ ಧರಣಿ – ತಾಲೂಕಿನ 258 ಅಂಗನವಾಡಿ ಕೇಂದ್ರ ಬಂದ್: 68 ಕೇಂದ್ರಗಳು ಮಾತ್ರ ಕಾರ್ಯ ನಿರ್ವಹಣೆ

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಕನಿಷ್ಠ ವೇತನ ನೀಡಬೇಕು ಹಾಗೂ ಗುಜರಾತ್ ರಾಜ್ಯದ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಕಾರ್ಯಕರ್ತೆಯರನ್ನು ಸಿ ದರ್ಜೆ, ಸಹಾಯಕಿಯರನ್ನು ಡಿ. ದರ್ಜೆ ನೌಕರರೆಂದು ಪರಿಗಣಿಸಬೇಕು ಎಂದು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಂದ ಬೆಂಗಳೂರಿನ ಫ್ರೀಡಂಪಾರ್ಕ್‌ಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಬೆಳ್ತಂಗಡಿ ತಾಲೂಕಿನವರೂ ಭಾಗಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನಲ್ಲಿರುವ 258 ಅಂಗನವಾಡಿ ಕೇಂದ್ರಗಳ ಪೈಕಿ ೨೫೮ ಅಂಗನವಾಡಿ ಕೇಂದ್ರಗಳು ಧರಣಿಯ ಹಿನ್ನೆಲೆಯಲ್ಲಿ ಬಂದ್ ಆಗಿದ್ದು ೬೮ ಅಂಗನವಾಡಿ ಕೇಂದ್ರಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದೆ.
ಮುಷ್ಕರದ ಆರಂಭ ದಿನವಾದ ಜ. 28ರಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರ ಆಪ್ತ ಕಾರ್ಯದರ್ಶಿ ಆಗಮಿಸಿ ಧರಣಿ ನಿರತರಿಂದ ಮನವಿ ಸ್ವೀಕರಿಸಿ ಬೇಡಿಕೆ ಈಡೇರಿಕೆಯ ಬಗ್ಗೆ ಭರವಸೆ ನೀಡಿದ್ದಾರೆ. ಅಲ್ಲದೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಹಾಗೂ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಭೇಟಿ ನೀಡಿ ಮನವಿ ಸ್ವೀಕರಿಸಿದ್ದಾರೆ. ಬೇಡಿಕೆ ಈಡೇರುವವರೆಗೂ ನಮ್ಮ ಧರಣಿ ಸತ್ಯಾಗ್ರಹ ಮುಂದುವರಿಯಲಿದೆ ಎಂದು ಈ ವೇಳೆ ಪ್ರತಿಭಟನಾ ನಿರತರು ತಿಳಿಸಿದ್ದಾರೆ. ಸಂಘದ ಜಿಲ್ಲಾಧ್ಯಕ್ಷೆ ತಾರಾ ಬಲ್ಲಾಳ್ ನೇತೃತ್ವದಲ್ಲಿ ಜಿಲ್ಲೆಯಿಂದ ಹಲವರು ಧರಣಿಯಲ್ಲಿ ಭಾಗಿಯಾಗಿದ್ದಾರೆ.

Exit mobile version