
ಬೆಳ್ತಂಗಡಿ: ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜ್ಯಾರಿಗೊಳಿಸಿದ್ದಾರೆ. ಕೊಲೆಯಾದ ಸುಹಾಸ್ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ವ್ಯಾಪ್ತಿಯವರಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಗಳಲ್ಲಿ ಪ್ರಕ್ಷುಬ್ಧ ಪರಿಸ್ಥಿತಿಯು ಬೂದಿ ಮುಚ್ಚಿದ ಕೆಂಡದಂತಿದ್ದು, ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ದ.ಕ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನಾದ್ಯಂತ ಮೇ 2 ರಿಂದ ಮೇ 5 ರವರೆಗೆ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜ್ಯಾರಿಗೊಳಿಸುವಂತೆ ಸೂಚನೆ ನೀಡಿದ್ದಾರೆ.



ನಿಷೇದಾಜ್ಞೆಯಲ್ಲಿ ಈ ರೀತಿ ಆದೇಶಿಸಲಾಗಿದೆ.
1) ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇದಿಸಿದೆ.
2) ಯಾವುದೇ ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಗದೆಗಳು, ಬಂದೂಕುಗಳು, ಚಾಕುಗಳು, ಕೋಲುಗಳ ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.
3) ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ.
4) ಯಾವುದೇ ರೀತಿಯ ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಪ್ರತಿಭಟನೆ ಜಾಥಾ ಮುಷ್ಕರ, ರಸ್ತೆ ತಡೆ ಸಾರ್ವಜನಿಕ/ರಾಜಕೀಯ ಸಭೆ ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಿದೆ.
5) ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಿದೆ.
6) ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಿದೆ.
7) ಸಾರ್ವಜನಿಕ ಕೋಮು ಸೌಹಾರ್ದಕ್ಕೆ ದಕ್ಕೆ ಬರವಂತಹ ಯಾವುದೇ ಕೂಗನ್ನು ಉಚ್ಚರಿಸುವುದು ಯಾ ಪರ ಹಾಡುವುದು, ಚೇಷ್ಟೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಯಾ ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ ಯಾ ಇತರ ಯಾವುದೇ ವಸ್ತುಗಳನ್ನು ಹಂಚುವುದು, ಭಿತ್ತಿ ಪತ್ರಗಳನ್ನು ಅಂಟಿಸುವುದರಿಂದ ಸಭ್ಯತನ, ಸದಾಚಾರ ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವರೇ ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ.
8) ಈ ನಿಷೇಧಾಜ್ಞೆಯು ಜ್ಯಾರಿಯಲ್ಲಿರುವ ಪ್ರದೇಶದಲ್ಲಿ ಸರ್ಕಾರದಿಂದ ಯಾ ಸರ್ಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಮತ್ತು ಪೊಲೀಸ್ ಅಧಿಕಾರಿಗಳು, ಬ್ಯಾಂಕ್ ಭದ್ರತಾ ಸಿಬ್ಬಂದಿಗಳು ಕರ್ತವ್ಯ ನಿರ್ವಹಣೆ ವೇಳೆ ಲಾಠಿ/ಶಸ್ತ್ರಾಸ್ತ್ರ ಮತ್ತು ಸಂಪರ್ಕ ಉಪಕರಣಗಳನ್ನು ಉಪಯೋಗಿಸುವುದಕ್ಕೆ ಅನ್ವಯವಾಗುವುದಿಲ್ಲ.