ಉಜಿರೆ: ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಚ್ಚ ಭಾರತ ಅಭಿಯಾನದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಮಾತನಾಡಿ ಸ್ವಚ್ಚ ಭಾರತ ಅಭಿಯಾನ ಕಾರ್ಯರೂಪಕ್ಕೆ ಬರಬೇಕಾದರೆ ಪ್ರತಿಯೊಬ್ಬರೂ ಸ್ವಚ್ಚತೆಯನ್ನು ದೈನಂದಿನ ಚಟುವಟಿಕೆಗಳ ಭಾಗವಹಿಸಿ ಜವಾಬ್ದಾರಿಯಿಂದ ವರ್ತಿಸಬೇಕು ಹಾಗೂ ಇತರರನ್ನು ಸ್ವಚ್ಚತೆ ಮತ್ತು ನೈರ್ಮಲ್ಯಕ್ಕೆ ಸಂಬಂದಿಸಿದ ಅಭ್ಯಾಸಗಳನ್ನು ಆಳವಡಿಸಿಕೊಳ್ಳಲು ಪ್ರೇರೇಪಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲ ಸಂತೋಷ್ ಮಾತನಾಡಿ, ಸ್ವಚ್ಛ ಭಾರತದ ಮೌಲ್ಯಗಳನ್ನು ಆಳವಡಿಸಿಕೊಳ್ಳುವುದು ಸಮಗ್ರ ಶಿಕ್ಷಣದ ಒಂದು ಭಾಗವಾಗಿದೆ ಎಂದು ಹೇಳಿದರು. ಇದು ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ಮತ್ತು ಪ್ರಜ್ಞಾವಂತ ನಾಗರಿಕರನ್ನಾಗಿ ಮಾಡುತ್ತದೆ ಎಂದರು. ಇಂಗ್ಲೀಷ್ ಭಾಷಾ ಉಪನ್ಯಾಸಕ ಶಂಕರ್ ಭಟ್ ಎಚ್. ಆರ್. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ವಿಜ್ಞಾನ ವಿಭಾಗದ ಮುಖ್ಯಸ್ಥ ರಾಜೇಶ್ ಕೆ.ಎ. ವಂದಿಸಿದರು.