ನಾಳ ದುರ್ಗಾಪರಮೇಶ್ವರಿ ದೇವಸ್ಥಾನ ಸಮಿತಿ ನೇಮಕ ವಿವಾದ: ದಾಖಲೆ ಹಾಜರುಪಡಿಸಲು ಹೈಕೋರ್ಟ್ ಆದೇಶ

0

ಬೆಳ್ತಂಗಡಿ: ನಾಳ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರನ್ನು ನೇಮಕ ಮಾಡಿರುವ ದಾಖಲೆಗಳನ್ನು ೧೦ ದಿನಗಳಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ. ವ್ಯವಸ್ಥಾಪನ ಮಂಡಳಿಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆಯ ನಿಯಮಗಳನ್ನು ಉಲ್ಲಂಸಿ ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದು ಗೇರುಕಟ್ಟೆ ನಿವಾಸಿ ದಿವಾಕರ ಆಚಾರ್ಯ ಹಾಗೂ ಜನಾರ್ದನ ಪೂಜಾರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ ವ್ಯವಸ್ಥಾಪನ ಸಮಿತಿಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಕಾಯ್ದೆಯ ಸೆಕ್ಷನ್ ೨೫ರ ಪ್ರಕಾರ ನೇಮಕ ಮಾಡಿಲ್ಲ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಶಿಫಾರಸಿನಂತೆ ನೇಮಕಾತಿ ನಡೆದಿದೆ ಎಂದು ಹೇಳಿದರು.

ಆಗ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ೧೦ ದಿನಗಳಲ್ಲಿ ಹಾಜರುಪಡಿಸಬೇಕು ಎಂದು ಸರಕಾರಕ್ಕೆ ನ್ಯಾಯಪೀಠ ನಿರ್ದೇಶಿಸಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಲ್ಲಿಸಿದ್ದ ಶಿಫಾರಸು ಪತ್ರದಲ್ಲಿ ಇದ್ದವರನ್ನು ವ್ಯವಸ್ಥಾಪನ ಸಮಿತಿಗೆ ಸದಸ್ಯರನ್ನಾಗಿ ನೇಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಂತೆ ನೇಮಕ ನಡೆದಿದೆ. ಎಂ. ರಾಘವೇಂದ್ರ, ನೀನಾ ಕುಮಾರ್, ಪಿ. ರೀಟಾ, ಮೋಹಿನಿ, ಹೇಮಂತ್ ಕುಮಾರ್, ಶರತ್ ಕುಮಾರ್, ಎಚ್. ರಾಘವ, ಕೆ. ಹರೀಶ್ ಹಾಗೂ ಬಿ. ಹರೀಶ್ ಕುಮಾರ್ ಅವರನ್ನು ವ್ಯವಸ್ಥಾಪನ ಸಮಿತಿಗೆ ನೇಮಕ ಮಾಡಲಾಗಿದೆ. ಈ ನೇಮಕಾತಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆಗೆ ವಿರುದ್ಧವಾಗಿದೆ. ಆದ್ದರಿಂದ ವ್ಯವಸ್ಥಾಪನಾ ಸಮಿತಿಯನ್ನು ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

LEAVE A REPLY

Please enter your comment!
Please enter your name here