ಪುಂಜಾಲಕಟ್ಟೆ: ಕೆ.ಪಿ.ಎಸ್. ಪುಂಜಾಲಕಟ್ಟೆಯ ಸರಕಾರಿ ಪದವಿ ಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಜು. 15ರಂದು ನೆರವೇರಿತು.
ಉದ್ಘಾಟಕರಾಗಿ ಆಗಮಿಸಿದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಎಳವೆಯಲ್ಲೇ ನಾಯಕತ್ವ ಗುಣ ಬೆಳೆಸಿಕೊಂಡರೆ ಜೀವನದಲ್ಲಿ ಬಹಳ ಎತ್ತರಕ್ಕೆ ಬೆಳೆಯುವುದಕ್ಕೆ ಸಾಧ್ಯ. ವಿದ್ಯಾರ್ಥಿ ಸಂಘದ ಕಾರ್ಯ ಚಟುವಟಿಕೆ ಇದಕ್ಕೆ ಪೂರಕ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಮಡಂತ್ಯಾರು ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಜೋಯಲ್ ಮೆಂಡೋನ್ಸ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯಿಂದ ದೂರವಿದ್ದು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಒತ್ತು ನೀಡಿದಲ್ಲಿ ಅದ್ಭುತವಾದ ಪ್ರಗತಿ ಹೊಂದಲು ಸಾಧ್ಯ ಎಂದರು.
ಸಮಾರಂಭದ ಅಧ್ಯಕ್ಷ ಸ್ಥಾನವನ್ನು ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪ ನವೀನ್ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರಾಂಶುಪಾಲ ಸರೋಜಿನಿ ಆಚಾರ್ ಪ್ರಸ್ತಾವಿಕ ನುಡಿಯೊಂದಿಗೆ ಸ್ವಾಗತಿಸಿದರು.
2025 ನೇ ಮಾರ್ಚ್ ತಿಂಗಳಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ ಪಡೆದ 38 ವಿದ್ಯಾರ್ಥಿಗಳನ್ನು ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನ ನೀಡಿ ಗೌರವಿಸಲಾಯಿತು. ವಾಸಂತಿ ಎಂ.ಕೆ. ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಉಪನ್ಯಾಸಕಿ ತಾಹೀರಬಾನು ನಿರೂಪಿಸಿದರು.ಉಪನ್ಯಾಸಕಿ ಸುಪ್ರೀತ ವಂದಿಸಿದರು.