Site icon Suddi Belthangady

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಮೂವರು ವಶಕ್ಕೆ

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಿಚಾರಣೆಗೆ ಠಾಣೆಗೆ ಕರೆದೊಯುತ್ತಿದ್ದ ವೇಳೆ ಕಾರ್ಕಳದ ಹೊಸ್ಮಾರಿನಲ್ಲಿ ಅಡಿಷನಲ್ ಎಸ್ಪಿ ಅವರ ವಾಹನಕ್ಕೆ ತಿಮರೋಡಿ ಅವರ ಬೆಂಬಲಿಗರ ಕಾರು ಢಿಕ್ಕಿಯಾದ ಘಟನೆ ಸಂಭವಿಸಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಘಟನೆಗೆ ಸಂಬಂಧಿಸಿದಂತೆ ಕಾರ್ಕಳ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸೃಜನ್, ಹಿತೇಶ್ ಶೆಟ್ಟಿ, ಸುಜಿತ್ ಮಡಿವಾಳ ಎಂದು ಗುರುತಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ರಾಜೀವ್ ಕುಲಾಲ್ ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸರು ಉಜಿರೆಯಲ್ಲಿರುವ ತಿಮರೋಡಿ ಮನೆಯಲ್ಲೇ ಅವರನ್ನು ವಶಕ್ಕೆ ಪಡೆದು ಬ್ರಹ್ಮಾವರಕ್ಕೆ ಕರೆದೊಯ್ಯುತ್ತಿದ್ದರು. ಈ ವೇಳೆ ಅವರ ಹಿಂದೆ ಬರುತ್ತಿದ್ದ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್ ವಾಹನಕ್ಕೆ ಗುದ್ದಿ ಕರ್ತವ್ಯಕ್ಕೆ ಅಡ್ಡಿ ಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

Exit mobile version