ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕ, ಮಾದಕ ದ್ರವ್ಯ ವಿರೋಧಿ ಕೋಶ, ಎನ್.ಸಿ.ಸಿ ಘಟಕ, ಯುವ ರೆಡ್ ಕ್ರಾಸ್ ಘಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಮಡಂತ್ಯಾರು ವಲಯ ಹಾಗೂ ಜನಜಾಗೃತಿ ವೇದಿಕೆ ಗುರುವಾಯನಕೆರೆ ಇದರ ಜಂಟಿ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಎಂಬ ಧ್ಯೇಯ ವಾಕ್ಯದೊಂದಿಗೆ ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಸೆ. 10ರಂದು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಅವರು ಮಾತನಾಡಿ ಯುವಜನತೆ ಭವಿಷ್ಯದ ಬಗ್ಗೆ ಸುಂದರ ಕನಸುಗಳನ್ನು ಕಟ್ಟಿಕೊಂಡು ಬದುಕನ್ನು ರೂಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಮಾದಕ ವಸ್ತುಗಳ ಭ್ರಮೆಯಿಂದ ಹೊರಗೆ ಬರುವಂತೆ ಕರೆ ನೀಡಿ, ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಪ್ರತಿಜ್ಞಾವಿಧಿಯನ್ನು ಬೋಧಿಸಿ ವ್ಯಸನಮುಕ್ತ ಸಮಾಜ ನಿರ್ಮಿಸುವಲ್ಲಿ ಯುವಕರು ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಅಲೆಕ್ಸ್ ಐವನ್ ಸಿಕ್ವೆರಾ ಯುವ ಜನತೆ ದುಶ್ಚಟಗಳಿಂದ ದೂರವಿದ್ದು ಸಮಾಜಕ್ಕೆ ಮಾದರಿಯಾಗುವಂತೆ ಬಾಳಬೇಕೆಂದು ನುಡಿದರು.
ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ, ಸೇವಾನಿರತೆ ಹರಿಣಾಕ್ಷಿ, ಐ.ಕ್ಯೂ.ಎ.ಸಿ ಸಂಯೋಜಕ ರಾಬಿನ್ ಜೋಸೆಫ್ ಸೇರ, ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಪ್ರಶಾಂತ್ ಎಂ., ಮಾದಕ ದ್ರವ್ಯ ವಿರೋಧಿಕೋಶದ ಸಂಯೋಜಕ ಲೆಫ್ಟಿನೆಂಟ್ ಆಲ್ವಿನ್ ಕೆಜಿ, ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ಜನಾರ್ಧನ್ ರಾವ್ ಡಿ., ಕಾಲೇಜಿನ ಪ್ರಾಧ್ಯಾಪಕ ವೃಂದದವರು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಎಲ್ಲಾ ಸ್ವಯಂಸೇವಕರು ಉಪಸ್ಥಿತರಿದ್ದರು. ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ಜನಾರ್ಧನ್ ರಾವ್ ಸ್ವಾಗತಿಸಿ, ಕಾರ್ಯಕ್ರಮವನ್ನು ನವ್ಯ ನಿರೂಪಿಸಿದರು. ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಆಲ್ವಿನ್ ಕೆಜಿ ವಂದಿಸಿದರು.