ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ನ.1ರಂದು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಮುಖ್ಯ ಅತಿಥಿ, ಉಜಿರೆಯ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ ಕನ್ನಡ ಶಿಕ್ಷಕ ರಾಧಾಕೃಷ್ಣ ಅವರು ಮಾತನಾಡಿ, “ಪರಭಾಷಾ ವ್ಯಾಮೋಹಕ್ಕೆ ಒಳಗಾಗದೆ ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ” ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನದ ಪಾರುಪತ್ಯಗಾರ ಲಕ್ಷ್ಮೀನಾರಾಯಣ ರಾವ್ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಿತಿಯ ಸದಸ್ಯ ಶ್ರೀಧರ್ ಶೆಟ್ಟಿ ಅವರು, ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.
ಮುಖ್ಯ ಶಿಕ್ಷಕಿ ಜಯಶ್ರೀ ಜೈನ್ ಅಧ್ಯಕ್ಷೀಯ ನುಡಿಗಳನ್ನಾಡಿದರು. ಕನ್ನಡ ಶಿಕ್ಷಕ ಯುವರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಒಂದು ಭಾಷೆ ಉಳಿದರೆ ಮಾತ್ರ ಆ ಕಾಲಘಟ್ಟದ ಸಂಸ್ಕೃತಿ ಉಳಿಯಲು ಸಾಧ್ಯ ಎಂದರು. ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಕನ್ನಡ ನಾಡು ನುಡಿಗೆ ಸಂಬಂಧಿಸಿದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಿಕ್ಷಕರಾದ ಶಶಿಧರ್ ಸ್ವಾಗತಿಸಿ, ವಿಕಾಸ ಆರಿಗ ವಂದಿಸಿದರು.

