ಬೆಳ್ತಂಗಡಿ: ೧೩ ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿರುವ ಉಜಿರೆ ಎಸ್‌ಡಿಎಂ ಕಾಲೇಜ್ ವಿದ್ಯಾರ್ಥಿನಿಯಾಗಿದ್ದ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಸೌಜನ್ಯಾ ಅವರ ಪ್ರಕರಣ ಮುಂದಿಟ್ಟುಕೊಂಡು ಶ್ರೀಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಮತ್ತು ಅವರ ಕುಟುಂಬದ ವಿರುದ್ಧ ಪರೋಕ್ಷವಾಗಿ ಆರೋಪ ಮಾಡಿ ತನ್ನ ಯೂಟ್ಯೂಬ್ ಚಾನಲ್‌ನಲ್ಲಿ ವೀಡಿಯೋ ಪ್ರಸಾರ ಮಾಡಿದ ಸಂಬಂಧ ಎಂ.ಡಿ.ಸಮೀರ್ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಠಾಣೆಯಲ್ಲಿ ದಾಖಲಾದ ಪ್ರಕರಣದ ವಿಚಾರಣ ವ್ಯಾಪ್ತಿ ಕುರಿತು ಸ್ಪಷ್ಟನೆ ನೀಡಲು ರಿಜಿಸ್ಟ್ರಾರ್ ಜನರಲ್ ಕಚೇರಿಗೆ ಹೈಕೋರ್ಟ್ ಸೂಚನೆ ನೀಡಿದೆ.
ತನ್ನ ವಿರುದ್ಧ ೨೦೨೫ರ ಮಾರ್ಚ್ ತಿಂಗಳಲ್ಲಿ ಬಳ್ಳಾರಿಯ ಕೌಲ್ ಬಜಾರ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಎಂ.ಡಿ.ಸಮೀರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.
ಈ ವೇಳೆ ಸರಕಾರದ ಪರ ವಕೀಲರು ವಾದ ಮಂಡಿಸಿ ಅರ್ಜಿಯ ವಿಚಾರಣಾ ಮಾನ್ಯತೆ ಬಗ್ಗೆ ಆಕ್ಷೇಪವಿದೆ ಎಂದು ಹೇಳಿದರು. ಬೆಂಗಳೂರು ಹೈಕೋರ್ಟ್ ಪ್ರಧಾನ ಪೀಠದಲ್ಲಿ ಅರ್ಜಿ ಸಲ್ಲಿಸಿರುವುದನ್ನು ಸಮರ್ಥಿಸಿಕೊಂಡ ಸಮೀರ್ ಪರ ವಕೀಲರು ಇಡೀ ಘಟನಾವಳಿಗಳು ನಡೆದದ್ದು ಬೆಂಗಳೂರಿನಲ್ಲಿ. ಮಹಾರಾಷ್ಟ್ರದ ಪ್ರಕರಣವೊಂದರಲ್ಲಿ ವಿಚಾರಣಾ ವ್ಯಾಪ್ತಿ ಬಗ್ಗೆ ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ ಎಂದರು. ಉಭಯ ಬಣದ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ನ.೧೦ಕ್ಕೆ ಮುಂದೂಡಿದೆ.
