ಉಜಿರೆ; ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಮೆಸ್ಕಾಂ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ. ಹರೀಶ್ ಕುಮಾರ್ ಭೇಟಿ ನೀಡಿದರು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಆಡಳಿತ ಮಂಡಳಿಯಿಂದ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಅತ್ಯುತ್ತಮ ವೈದ್ಯಕೀಯ ಸೇವೆ ನೀಡುತ್ತಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಬೆಳ್ತಂಗಡಿ ತಾಲೂಕು ಮಾತ್ರವಲ್ಲದೆ ಆಸುಪಾಸಿನ ತಾಲೂಕಿನಲ್ಲಿ ದೊರೆಯದ ಅತ್ಯಾಧುನಿಕ ಹೈಟೆಕ್ ವೈದ್ಯಕೀಯ ಸೇವೆ ಇಲ್ಲಿ ದೊರೆಯುತ್ತಿದೆ. ಈ ಆಸ್ಪತ್ರೆಯ ಸೇವೆ ವಿಸ್ತಾರವಾಗುತ್ತಿದ್ದು, ಜನತೆಗೆ ಇನ್ನೂ ಹೆಚ್ಚಿನ ವೈದ್ಯಕೀಯ ಸೇವೆ ಸಿಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದೀಪಾವಳಿಯಂದು ಆಯೋಜಿಸಲಾಗಿದ್ದ ವಿವಿಧ ವಿಭಾಗಗಳ ಅಲಂಕಾರ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಕೆ. ಹರೀಶ್ ಕುಮಾರ್ ಬಹುಮಾನ ವಿತರಿಸಿದರು. ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್ ಪಿ., ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

