ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನ. 22ರಂದು ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಶಿಕ್ಷಕ ರಕ್ಷಕ ಸಂಘದ ಸಹಯೋಗದೊಂದಿಗೆ 2025-26ನೇ ಸಾಲಿನ ಪೋಷಕರ ಸಭೆಯನ್ನು ಆಯೋಜಿಸಲಾಯಿತು.
ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ವೈಲೆಟ್ ಮೋರಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಪಾತ್ರದ ಕುರಿತಾದ ಸೂಕ್ಷ್ಮ ವಿಚಾರಗಳನ್ನು ತಿಳಿಸಿದರು. ಸಭಾಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲ ಪ್ರೊ. ಸುರೇಶ್ ವಿ. ಕಾಲೇಜಿನಲ್ಲಿ ಲಭ್ಯವಿರುವ ಎಲ್ಲ ಸೌಲಭ್ಯಗಳ ಕುರಿತಾಗಿ ಸಮಗ್ರ ಮಾಹಿತಿ ನೀಡಿದರು. ಮತ್ತು ವಿದ್ಯಾರ್ಥಿಗಳ ಪ್ರಗತಿಯೊಂದಿಗೆ ಸಂಸ್ಥೆಯ ಬೆಳವಣಿಗೆಗೆ ಸಹಕಾರ ನೀಡುವಂತೆ ತಿಳಿಸಿದರು. ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಉಸ್ಮಾನ್, ಜೊತೆ ಕಾರ್ಯದರ್ಶಿ ಪ್ರಮೀಳ ಹಾಗೂ ಪೋಷಕರು ಉಪಯುಕ್ತ ಮಾಹಿತಿಗಳನ್ನು ಸಭೆಯಲ್ಲಿ ಹಂಚಿಕೊಂಡರು.
ಐ.ಕ್ಯೂ.ಎ.ಸಿ ಸಂಚಾಲಕ ಡಾ. ಕುಶಾಲಪ್ಪ ಎಸ್. ಕಾರ್ಯಕ್ರಮದ ಕುರಿತಾಗಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ರಕ್ಷಕ ಸಂಘದ ಸಂಚಾಲಕರಾದ ಸಹಪ್ರಾಧ್ಯಾಪಕ ನವೀನ್ ಅತಿಥಿಗಳನ್ನು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಪದ್ಮನಾಭ ಕೆ, ವಿಭಾಗ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಪಾಲ್ಗೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಿದರು.
ಬಿ.ಎ. ವಿದ್ಯಾರ್ಥಿ ಜಗದೀಶ್ ಪ್ರಾರ್ಥನೆ ನೆರವೇರಿಸಿದರು. ಪ್ರಥಮ ಎಂ.ಎ. ವಿದ್ಯಾರ್ಥಿನಿ ಪೂಜಾ ಕಾರ್ಯಕ್ರಮ ನಿರೂಪಣೆ ಮಾಡಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ರಾಜೇಶ್ವರಿ ಎಚ್. ಎಸ್. ವಂದನಾರ್ಪಣೆ ಮಾಡಿದರು.

