ಮಹೇಶ್ ಶೆಟ್ಟಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ-೩ನೇ ಬಾರಿಯ ಗಡಿಪಾರು ಆದೇಶಕ್ಕೂ ಹೈಕೋರ್ಟ್‌ನಿಂದ ತಾತ್ಕಾಲಿಕ ತಡೆಯಾಜ್ಞೆ

0

ಬೆಳ್ತಂಗಡಿ: ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಮತ್ತು ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥರೂ ಆಗಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ(೫೭ವ) ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಮೂರನೇ ಬಾರಿ ಹೊರಡಿಸಿದ್ದ ಆದೇಶಕ್ಕೂ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ತನ್ನನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿರುವ ಸಹಾಯಕ ಆಯುಕ್ತರ ಆದೇಶಕ್ಕೆ ತಡೆ ನೀಡಬೇಕು ಎಂದು ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಮಾ.೨೪ರಂದು ಹೈಕೋರ್ಟ್ ನ್ಯಾಯಮೂರ್ತಿ ಸಚಿನ್ ಮುಗ್ದಂ ಅವರ ಪೀಠದಲ್ಲಿ ವಿಚಾರಣೆಗೆ ಬಂದಿತ್ತು. ಈ ವೇಳೆ ಸರಕಾರದ ಪರ ಹಾಜರಾಗಬೇಕಿದ್ದ ವಿಶೇಷ ಸರಕಾರಿ ಅಭಿಯೋಜಕರು ಗೈರಾಗಿದ್ದರು. ಹಾಗಾಗಿ ವಿಚಾರಣೆ ಮುಂದೂಡಬೇಕು ಎಂದು ಅವರ ಕಿರಿಯ ವಕೀಲರು ಕೋರ್ಟ್‌ಗೆ ಮನವಿ ಮಾಡಿದರು. ಆದರೆ ಇದನ್ನು ಒಪ್ಪದ ನ್ಯಾಯಮೂರ್ತಿಯವರು ಗಡಿಪಾರು ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡುವುದಾಗಿ ತಿಳಿಸಿ ಮುಂದಿನ ವಿಚಾರಣೆಯನ್ನು ಮಾ.೨೬ಕ್ಕೆ ಮುಂದೂಡಿದರು. ಮಹೇಶ್ ಶೆಟ್ಟಿ ಪರ ವಕೀಲರಾದ ಎಂ.ಆರ್. ಬಾಲಕೃಷ್ಣ ಸುಳ್ಯ ಮತ್ತು ಮೋಹಿತ್ ಕುಮಾರ್ ಪುತ್ತೂರು ಅವರು ಹೈಕೋರ್ಟ್‌ನಲ್ಲಿ ವಾದ ಮಂಡಿಸುತ್ತಿದ್ದಾರೆ.

ಮೂರನೇ ಬಾರಿಯೂ ಪೊಲೀಸರಿಗೆ ಸಿಗದ ತಿಮರೋಡಿ: ಉಜಿರೆ ನಿವಾಸಿಯಾಗಿರುವ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಎ.ಸಿ. ಸ್ಟೆಲ್ಲಾ ವರ್ಗೀಸ್ ಅವರು ೨೦೨೬ರ ಮಾ.೧೬ರಿಂದ ಸೆ.೧೬ರವರೆಗೆ ಗಡಿಪಾರು ಮಾಡಿ ಮೂರನೇ ಸಲ ಆದೇಶ ಹೊರಡಿಸಿದ ಬೆನ್ನಲ್ಲಿಯೇ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ನೇತೃತ್ವದಲ್ಲಿ ಪೊಲೀಸರ ತಂಡ ಗಡಿಪಾರು ಆದೇಶದ ಪ್ರತಿಯನ್ನು ಜಾರಿ ಮಾಡಲು ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಮಾ.೧೬ರಂದು ಮಧ್ಯರಾತ್ರಿ ತೆರಳಿತ್ತು. ಈ ವೇಳೆ ಮಹೇಶ್ ಶೆಟ್ಟಿ ಅವರು ಮನೆಯಲ್ಲಿ ಇರದ ಕಾರಣ ಅವರ ಮನೆಯ ಗೋಡೆಗೆ ನೋಟಿಸ್ ಅಂಟಿಸಿ ವಾಪಸ್ ಬರಲಾಗಿತ್ತು. ಈ ಹಿಂದೆ ಎರಡು ಬಾರಿ ಗಡಿಪಾರು ಆದೇಶ ಆಗಿದ್ದಾಗಲೂ ಮಹೇಶ್ ಶೆಟ್ಟಿ ಅವರನ್ನು ವಶಕ್ಕೆ ಪಡೆಯಲು ಪೊಲೀಸರಿಗೆ ಸಾಧ್ಯವಾಗಿರಲಿಲ್ಲ. ಗಡಿಪಾರು ಆದೇಶಕ್ಕೆ ಹೈಕೋರ್ಟ್‌ನಿಂದ ತಡೆಯಾಜ್ಞೆ ಸಿಕ್ಕಿದ ಕೂಡಲೇ ಮಹೇಶ್ ಶೆಟ್ಟಿ ಉಜಿರೆಯಲ್ಲಿ ಪ್ರತ್ಯಕ್ಷರಾಗುತ್ತಿದ್ದರು. ಇದು ಪೊಲೀಸ್ ಇಲಾಖೆಗೆ ಇರಿಸು ಮುರಿಸು ಉಂಟು ಮಾಡಿತ್ತು. ಮೂರನೇ ಬಾರಿಯಾದರೂ ಮಹೇಶ್ ಶೆಟ್ಟಿ ಅವರನ್ನು ವಶಕ್ಕೆ ಪಡೆದು ಮಾನ್ವಿ ತಾಲೂಕಿಗೆ ಗಡಿಪಾರು ಮಾಡಬೇಕು ಎಂದು ಪಣತೊಟ್ಟಿದ್ದ ಖಾಕಿ ಪಡೆ ವಿವಿಧೆಡೆ ಬಲೆ ಬೀಸಿತ್ತು. ಈ ಬಾರಿಯೂ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದ ತಿಮರೋಡಿ ಅವರು ಭೂಗತರಾಗಿದ್ದರಲ್ಲದೆ ತಮ್ಮ ವಕೀಲರ ಮೂಲಕ ಹೈಕೋರ್ಟ್ ಮೊರೆ ಹೋಗಿದ್ದರು. ಸಹಾಯಕ ಆಯುಕ್ತರು ಗಡಿಪಾರು ಮಾಡಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿಗಳು ಗಡಿಪಾರು ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದಾರೆ.

ಪ್ರಥಮ ಆದೇಶದಲ್ಲಿ ಒಂದು ವರ್ಷ, ಎರಡನೇ ಆದೇಶದಲ್ಲಿ ೯ ತಿಂಗಳು, ಮೂರನೇ ಆದೇಶದಲ್ಲಿ ೬ ತಿಂಗಳು ಗಡಿಪಾರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದ.ಕ.ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು ಮಾಡಿದ್ದ ಆದೇಶಕ್ಕೆ ಹೈಕೋರ್ಟ್ ಈ ಹಿಂದೆಯೂ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು. ಮಹೇಶ್ ಶೆಟ್ಟಿ ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಪರಿಗಣಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳು ಕಾನೂನು ಪ್ರಕ್ರಿಯೆ ಅನುಸರಿಸಿ ಹೊಸದಾಗಿ ಗಡಿಪಾರು ಆದೇಶ ಮಾಡುವಂತೆ ನಿರ್ದೇಶಿಸಿದ್ದರು. ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ೨೦೨೫ರ ಡಿಸೆಂಬರ್ ೧೭ರಂದು ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹೊರಡಿಸಿದ್ದ ಆದೇಶವನ್ನು ರದ್ದು ಮಾಡುವಂತೆ ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿತ್ತು. ಗಡಿಪಾರು ಪ್ರಕರಣದಲ್ಲಿ ಈ ಹಿಂದೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರತಿವಾದಿಯಾಗಿರುವ ಉಪ ವಿಭಾಗಾಧಿಕಾರಿಗಳು ಅನುಸರಿಸಿಲ್ಲ. ಖುಲಾಸೆಯಾಗಿರುವ ಪ್ರಕರಣಗಳನ್ನು ಉಲ್ಲೇಖಿಸಿ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು ಅದಕ್ಕೆ ನಾನು ಸಲ್ಲಿಸಿರುವ ಆಕ್ಷೇಪಣೆಗಳನ್ನು ಪರಿಗಣಿಸದೆ ವಿವೇಚನಾ ರಹಿತವಾಗಿ ಆದೇಶ ಹೊರಡಿಸಲಾಗಿದೆ ಎಂದು ಮಹೇಶ್ ಶೆಟ್ಟಿ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಯವರು ಪ್ರಕರಣವನ್ನು ಮತ್ತೆ ಉಪವಿಭಾಗಾಧಿಕಾರಿಗೆ ಹಿಂದಿರುಗಿಸಲಾಗುತ್ತಿದೆ. ನ್ಯಾಯಾಲಯದ ಈ ಆದೇಶದ ಪ್ರತಿ ದೊರೆತ ೩ ವಾರಗಳ ಒಳಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಸಲ್ಲಿಸಿರುವ ಆಕ್ಷೇಪಣೆಯನ್ನು ಪರಿಗಣಿಸಿ ಉಪವಿಭಾಗಧಿಕಾರಿಗಳು ಕಾನೂನು ಪ್ರಕಾರ ಸೂಕ್ತ ಆದೇಶ ಹೊರಡಿಸಬೇಕು ಎಂದು ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತರು ಪರಿಷ್ಕೃತ ಆದೇಶ ಹೊರಡಿಸಿ ಮಹೇಶ್ ಶೆಟ್ಟಿ ಅವರನ್ನು ೨ನೇ ಬಾರಿ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಇದಕ್ಕೆ ಮೊದಲು ಬಂಟ್ವಾಳ ಡಿವೈಎಸ್‌ಪಿಯವರ ಕೋರಿಕೆಯಂತೆ ಪದೇ ಪದೇ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವುದರಿಂದ ರೌಡಿಶೀಟರ್ ಆಗಿರುವ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದ.ಕ. ಜಿಲ್ಲೆಯಿಂದ ಗಡೀಪಾರು ಮಾಡಿ ಸೆ. ೧೭ರಂದು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಹೊರಡಿಸಿದ್ದ ಆದೇಶಕ್ಕೂ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.

ಗಡೀಪಾರು ಆದೇಶವನ್ನು ಕರ್ನಾಟಕ ಪೊಲೀಸ್ ಕಾಯ್ದೆಯ ಯಾವ ಕಲಂನಡಿ ಮಾಡಲಾಗಿದೆ ಎಂಬುದನ್ನು ಸ್ಪಷ್ಟವಾಗಿ ಕಾರಣ ಸಹಿತ ತಿಳಿಸಿಲ್ಲವಾದ್ದರಿಂದ ಈ ಬಗ್ಗೆ ಮತ್ತೊಂದು ಆದೇಶ ಮಾಡಲು ಹೈಕೋರ್ಟ್ ಸಹಾಯಕ ಆಯುಕ್ತರಿಗೆ ಹೈಕೋರ್ಟ್ ಸೂಚಿಸಿತ್ತು. ರಿಟ್ ಪಿಟಿಶನ್ ಆದೇಶದ ಪ್ರತಿಯನ್ನು ಸ್ವೀಕರಿಸಿದ ೧೫ ದಿನದೊಳಗೆ ಆದೇಶ ಮಾಡುವಂತೆಯೂ ಹೈಕೋರ್ಟ್ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಪುತ್ತೂರಿನ ಎ.ಸಿ. ಕೋರ್ಟ್‌ನಲ್ಲಿ ಮತ್ತೆ ವಿಚಾರಣೆ ನಡೆದು ಪುನಃ ಗಡೀಪಾರಿನ ಆದೇಶ ಹೊರಡಿಸಲಾಗಿತ್ತು. ಪ್ರಥಮ ಆದೇಶದಲ್ಲಿ ಸಹಾಯಕ ಆಯುಕ್ತರು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಎರಡನೇ ಬಾರಿ ೯ ತಿಂಗಳು ಗಡಿಪಾರು ಮಾಡಿ ಆದೇಶಿಸಿದ್ದರು. ಮೂರನೇ ಬಾರಿ ಆರು ತಿಂಗಳು ಗಡಿಪಾರು ಮಾಡಿ ಆದೇಶಿಸಿದ್ದರು. ಇದೀಗ ಮೂರನೇ ಆದೇಶಕ್ಕೂ ಹೈಕೋರ್ಟ್ ತಾತ್ಕಾಲಿ ತಡೆಯಾಜ್ಞೆ ನೀಡಿದೆ. ಮಾ.೨೬ರಂದು ಹೈಕೋರ್ಟ್‌ನಲ್ಲಿ ಏನೆಲ್ಲಾ ಬೆಳವಣಿಗೆಗಳು ನಡೆಯಲಿದೆ ಎಂದು ಕಾದು ನೋಡಬೇಕಿದೆ.

LEAVE A REPLY

Please enter your comment!
Please enter your name here