






ಮೊಬೈಲ್ ಫೋನ್‌ಗೆ ಕರೆ ಮಾಡಿ ಯಕ್ಷಗಾನ ಕಲಾವಿದರು ಮತ್ತು ಅವರ ಹೆತ್ತವರನ್ನು ಅವಹೇಳನ ಮಾಡಿರುವುದಲ್ಲದೆ ಬೆದರಿಕೆ ಹಾಕಿದ ಆರೋಪದಡಿ ಪುತ್ತೂರು ಮಹಿಳಾ ಪೊಲೀಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೇಸ್‌ಗೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮಂಗಳೂರಿನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಕಲಾವಿದ ಸುಂದರ್ ರೈ ಮಂದಾರ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಕೇಸ್‌ಗೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರು ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯ ವಿಚಾರಣೆ ನಡೆದಿದ್ದು ಇನ್ನಷ್ಟೇ ನ್ಯಾಯಾಧೀಶರು ಆದೇಶ ಪ್ರಕಟಿಸಬೇಕಿದೆ. ಯಕ್ಷಗಾನ ಕಲಾವಿದರಾಗಿರುವ ಪ್ರಜ್ವಲ್ ಕುಮಾರ್ ಗುರುವಾಯನಕೆರೆ ಅವರ ಜತೆ ಏ.೧೧ರಂದು ಮೊಬೈಲ್ ಫೋನ್‌ನಲ್ಲಿ ಮಾತನಾಡುವ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಅವರು ಯಕ್ಷಗಾನ ಕಲಾವಿದರಾಗಿರುವ ತನ್ನ ಪುತ್ರ ದಿನೇಶ್ ಕೊಡಪದವು ಹಾಗೂ ನನ್ನ ಬಗ್ಗೆ ಹೀನಾಯವಾಗಿ ಮಾತನಾಡಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ದಿನೇಶ್ ಕೋಡಪವು ಅವರ ತಾಯಿ ಲೀಲಾವತಿ ಶೆಟ್ಟಿಗಾರ್ ಅವರು ಪುತ್ತೂರಿನ ಮಹಿಳಾ ಠಾಣೆಯಲ್ಲಿ ಏ.೧೩ರಂದು ಪ್ರಕರಣ ದಾಖಲಿಸಿದ್ದರು. ಬಿಎನ್‌ಎಸ್ ಕಾಯಿದೆ ಕಲಂ ೧೯೬ (೧), ೩೫೨, ೩೫೧ (೨) ಹಾಗೂ ೭೯ರಡಿ ಧರ್ಮ ನಿಂದನೆ, ಅವಾಚ್ಯ ಶಬ್ದಗಳಿಂದ ಬೈಗುಳ, ಜೀವ ಬೆದರಿಕೆ ಹಾಗೂ ಮಾನ ಹಾನಿ ಮಾಡಿದ ಆರೋಪದಡಿ ದಾಖಲಾಗಿದ್ದ ಈ ಕೇಸ್‌ನಲ್ಲಿ ಕಲಾವಿದರಾದ ಸುಂದರ ರೈ ಮಂದಾರ, ಪ್ರಜ್ವಲ್ ಕುಮಾರ್ ಅವರಿಗೂ ಬೈದಿರುವ ಬಗ್ಗೆ ಉಲ್ಲೇಖಿಸಲಾಗಿತ್ತು.


ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಅವರು ತಮ್ಮ ಪರ ವಕೀಲ ವಿಜಯ ವಾಸು ಪೂಜಾರಿ ಅವರ ಮೂಲಕ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಯುವ ವೇಳೆ ನಿರೀಕ್ಷಣಾ ಜಾಮೀನು ಮಂಜೂರು ಮಾಡುವುದಕ್ಕೆ ಸರಕಾರಿ ಅಭಿಯೋಜಕ ಮೋಹನ್ ಕುಮಾರ್ ಉಪ್ಪಿನಂಗಡಿ ಅವರು ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ್ದರು. ವಾದ ಪ್ರತಿವಾದ ಆಲಿಸಿದ ಮಂಗಳೂರಿನ ಆರನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ಮಾರುತಿ ಕದುಟಿ ಅವರು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿದ್ದಾರೆ. ಕಲಾವಿದರನ್ನು ಮತ್ತು ಅವರ ಮನೆಯವರನ್ನು ನಿಂದಿಸಿ ಅವಹೇಳನ ಮಾಡಿ ಬೆದರಿಕೆ ಒಡ್ಡಿದ ಆರೋಪದಡಿ ಕಲಾವಿದ ಸುಂದರ್ ರೈ ಮಂದಾರ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಕೇಸ್‌ಗೆ ಸಂಬಂದಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಪುತ್ತೂರಿನ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ತಮ್ಮ ಪರ ವಕೀಲ ವಿಜಯ ವಾಸು ಪೂಜಾರಿ ಅವರ ಮೂಲಕ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯ ವಿಚಾರಣೆ ನಡೆದ ವೇಳೆ ವಕೀಲ ವಿಜಯ ವಾಸು ಪೂಜಾರಿ ಅವರು ಮಹೇಶ್ ಶೆಟ್ಟಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಮನವಿ ಸಲ್ಲಿಸಿದ್ದರು. ಸರಕಾರಿ ಅಭಿಯೋಜಕಿ ಜಯಂತಿ ಅವರು ನಿರೀಕ್ಷಣಾ ಜಾಮೀನು ಮಂಜೂರು ಮಾಡುವುದಕ್ಕೆ ಪ್ರಬಲ ಆಕ್ಷೇಪ ಸಲ್ಲಿಸಿದ್ದಾರೆ. ವಾದ ಪ್ರತಿವಾದ ಆಲಿಸಿರುವ ನ್ಯಾಯಾಧೀಶರು ಆದೇಶ ಇನ್ನಷ್ಟೇ ಪ್ರಕಟಿಸಬೇಕಿದೆ. ಹೊಸದಾಗಿ ಸುಂದರ್ ರೈ ಮಂದಾರ ಅವರು ಸುಳ್ಳು ಸಾಕ್ಷಿ ಹೇಳುವಂತೆ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಕೇಸ್‌ಗೆ ಸಂಬಂಧಿಸಿಯೂ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಲು ತಿಮರೋಡಿ ಪರ ವಕೀಲರು ಸಿದ್ಧತೆ ನಡೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.








