







ಬೆಳ್ತಂಗಡಿ: ತಾಲೂಕಿನ ಓಡಿಲ್ನಾಳ ಗ್ರಾಮದ ನಿವಾಸಿ, ಸುಮಾರು 5 ತಿಂಗಳ ಹಿಂದೆ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದ ಬಾಲಕ ಸುಮಂತ್ ಪ್ರಕರಣಕ್ಕೆ ಮೃತರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಜೂ.3 ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು (SP) ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಲಾಯಿತು.
ಈ ಹಿಂದೆ ನಡೆದ ವಿಧಾನಮಂಡಲ ಅಧಿವೇಶನದಲ್ಲಿಯೇ ಈ ಗಂಭೀರ ವಿಷಯವನ್ನು ಪ್ರಸ್ತಾಪಿಸಲಾಗಿತ್ತು. ಅಲ್ಲದೆ, ಗೃಹಮಂತ್ರಿಗಳನ್ನು ಖುದ್ದಾಗಿ ಭೇಟಿ ಮಾಡಿ ಸೂಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಮನವಿ ಸಲ್ಲಿಸಲಾಗಿತ್ತು. ಆದಾಗ್ಯೂ, ಇಷ್ಟೊಂದು ಸಮಯ ಕಳೆದರೂ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣದೆ ಕುಟುಂಬಕ್ಕೆ ನ್ಯಾಯ ಸಿಗದಿರುವುದು ತೀವ್ರ ನೋವಿನ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಲಾಗಿದೆ.


ಈ ಹಿನ್ನೆಲೆಯಲ್ಲಿ, ಮೃತ ಬಾಲಕ ಸುಮಂತ್ ಪೋಷಕರು ಹಾಗೂ ಕುಟುಂಬದ ಸದಸ್ಯರೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಖುದ್ದಾಗಿ ಭೇಟಿ ಮಾಡಲಾಯಿತು. ಈ ವೇಳೆ ಪ್ರಕರಣದ ಇದುವರೆಗಿನ ಪ್ರಗತಿ ಮತ್ತು ತನಿಖೆಯ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.
ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಎಲ್ಲಾ ಆಯಾಮಗಳಲ್ಲೂ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಆದಷ್ಟು ಶೀಘ್ರವಾಗಿ ಸತ್ಯಾಸತ್ಯತೆಯನ್ನು ಹೊರತರಬೇಕೆಂದು ಎಸ್‌ಪಿಯವರಿಗೆ ಒತ್ತಾಯಿಸಲಾಯಿತು.









