






ಉಜಿರೆ: ಉಜಿರೆ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜನರ ಆರೋಗ್ಯಕ್ಕೆ ಕುತ್ತು ತಂದಿರುವ ಸಮಸ್ಯೆಯೊಂದು ತಲೆದೋರಿದೆ. ಉಜಿರೆ ಕೆಳಗಿನ ಪೆಟ್ರೋಲ್ ಬಂಕ್ ಸಮೀಪದ ಚರಂಡಿಯಲ್ಲಿ ಕೊಳಚೆ ನೀರು ನಿಂತು ದುರ್ವಾಸನೆ ಬೀರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಆತಂಕ ಸಾರ್ವಜನಿಕರಲ್ಲಿ ಮೂಡಿದೆ. ಕಳೆದ ಕೆಲವು ದಿನಗಳಿಂದ ಮಳೆ ಇಲ್ಲದ ಕಾರಣ ಚರಂಡಿಯಲ್ಲಿನ ಕೊಳಚೆ ನೀರು ಹರಿದು ಹೋಗದೆ ಹಾಗೇ ನಿಂತುಕೊಂಡಿದೆ.ಅಪೂರ್ಣ ಕಾಮಗಾರಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ನಿರ್ಮಿಸುತ್ತಿರುವ ಅತ್ಯಾಧುನಿಕ ಚರಂಡಿಯ ಕಾಮಗಾರಿ ಅಪೂರ್ಣವಾಗಿರುವುದರಿಂದ ನೀರು ಸರಾಗವಾಗಿ ಹರಿಯುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಶಾಲೆ ಪಕ್ಕದಲ್ಲೇ: ಸಮೀಪದಲ್ಲೇ ಶಾಲೆ ಇರುವುದರಿಂದ ಮಕ್ಕಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ರೋಗದ ಭೀತಿ: ನೀರು ನಿಂತಿರುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿದ್ದು, ಡೆಂಗ್ಯೂ, ಮಲೇರಿಯಾ ಸೇರಿದಂತೆ ಇತರ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ವ್ಯಕ್ತವಾಗಿದೆ.ಸಾರ್ವಜನಿಕರ ಬೇಡಿಕೆ:ತಕ್ಷಣ ಈ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಸಂಬಂಧಪಟ್ಟವರು ಗ್ರಾಮ ಪಂಚಾಯಿತಿ, ರಾಷ್ಟ್ರೀಯ ಹೆದ್ದಾರಿ ಇಲಾಖೆ, ಗುತ್ತಿಗೆದಾರರು ಮತ್ತು ಆರೋಗ್ಯ ಇಲಾಖೆ ತಕ್ಷಣವೇ ನೀರು ಹರಿಯುವಂತೆ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೆ ತರಬೇಕು. ಜನತೆಯ ಆರೋಗ್ಯದ ಹಿತದೃಷ್ಟಿಯಿಂದ ಜನಪ್ರತಿನಿಧಿಗಳು ಮಧ್ಯಪ್ರವೇಶಿಸಿ ಶೀಘ್ರ ಪರಿಹಾರ ಒದಗಿಸಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.









