







ಬೆಳ್ತಂಗಡಿ: ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಭಜನಾ ಕಾರ್ಯಕ್ರಮವನ್ನು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್. ಜನಾರ್ದನ್ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೆ.ಎನ್. ಜನಾರ್ದನ್ ಅವರು, “ದಿನನಿತ್ಯದ ಜೀವನದ ಒತ್ತಡ ಮತ್ತು ಆತಂಕಗಳನ್ನು ದೂರ ಮಾಡಿ ಮನಸ್ಸಿಗೆ ನೆಮ್ಮದಿ ನೀಡುವಲ್ಲಿ ಭಜನೆ ಪ್ರಮುಖ ಪಾತ್ರ ವಹಿಸುತ್ತದೆ. ಭಜನೆ ನಡೆಯುವ ಸ್ಥಳದಲ್ಲಿ ಧನಾತ್ಮಕ ಕಂಪನಗಳು ಸೃಷ್ಟಿಯಾಗುತ್ತವೆ. ಅಲ್ಲದೆ, ದೇವರ ನಾಮಸ್ಮರಣೆಯತ್ತ ಗಮನ ಹರಿಸುವುದರಿಂದ ಮೆದುಳಿನ ಏಕಾಗ್ರತೆ ಮತ್ತು ಸ್ಮರಣಶಕ್ತಿ ವೃದ್ಧಿಯಾಗುತ್ತದೆ” ಎಂದು ಅಭಿಪ್ರಾಯಪಟ್ಟರು.



ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಜನಾ ಪರಿಷತ್ ರಾಜ್ಯಾಧ್ಯಕ್ಷರಾದ ಪಿ. ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಮಾತನಾಡಿ, “ಸಮೂಹ ಭಜನೆಗಳು ಸಮಾಜದಲ್ಲಿ ಸೌಹಾರ್ದತೆಯನ್ನು ಬೆಳೆಸುತ್ತವೆ. ಜಾತಿ, ಮತ ಭೇದಗಳನ್ನು ಮರೆತು ಎಲ್ಲರೂ ಒಟ್ಟಾಗಿ ಹಾಡುವುದರಿಂದ ಐಕ್ಯತೆ ಮೂಡುತ್ತದೆ. ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿ, ಭಾಷೆ ಮತ್ತು ಧಾರ್ಮಿಕ ಮೌಲ್ಯಗಳನ್ನು ಪರಿಚಯಿಸಲು ಭಜನೆ ಅತ್ಯಂತ ಸರಳ ಮತ್ತು ಪರಿಣಾಮಕಾರಿ ಮಾರ್ಗವಾಗಿದೆ” ಎಂದರು.
ಅಲ್ಲದೆ, ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ. ಅಳಿಯೂರು, ಸಿರಿ ಸಂಸ್ಥೆಯ ನಿರ್ದೇಶಕ ಪ್ರಸನ್ನ ಯು., ತಾಲೂಕು ಭಜನಾ ಪರಿಷತ್ ಅಧ್ಯಕ್ಷ ರವಿರಾಜ್ ಚಾರ್ಮಾಡಿ, ಕಾರ್ಯದರ್ಶಿ ಚಂದ್ರಶೇಖರ ಗೌಡ, ಕೋಶಾಧಿಕಾರಿ ಗಣೇಶ್ ಕಣ್ಣಾಜೆ, ಭಜನಾ ಸಂಚಾಲಕಿ ಪದ್ಮಾವತಿ ಹಾಗೂ ಸಿರಿ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಜೀವನ್ ಶೆಟ್ಟಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.









