









ಬೆಳ್ತಂಗಡಿ: ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಮಲೆಕುಡಿಯ ಕಾಲೊನಿಗಳಿಗೆ ಅರಣ್ಯ ಹಕ್ಕು ಕಾಯಿದೆಯ ಸಕ್ಷನ್ ೩(೨)ರಡಿ ಮೂಲ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಕರ್ತವ್ಯ ಲೋಪ ಎಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಂ ಬಾಬು ಅವರಿಗೆ ರಾಷ್ಟ್ರೀಯ ಪರಿಶಿಷ್ಟ ವರ್ಗಗಳ ಆಯೋಗ ನೋಟಿಸ್ ಜಾರಿಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮಕ್ಕೆ ಸಂಬಂಧಿಸಿದಂತೆ ೨೦೨೨ರಲ್ಲಿ ಅರಣ್ಯ ಹಕ್ಕು ಕಾಯಿದೆಯ ಸೆಕ್ಷನ್ ೩(೨)ರಡಿ ರಸ್ತೆ ಹಾಗೂ ವಿದ್ಯುತ್ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ಅರಣ್ಯ ಇಲಾಖೆ ಅನುಮೋದಿಸದೆ ತಿರಸ್ಕರಿಸಿತ್ತು. ಆದರೆ ತಿರಸ್ಕಾರದ ಕಾರಣವನ್ನು ಲಿಖಿತವಾಗಿ ತಿಳಿಸಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಹರೀಶ್ ಎಳನೀರ್ ಅವರು ರಾಷ್ಟ್ರೀಯ ಪರಿಶಿಷ್ಟ ವರ್ಗಗಳ ಆಯೋಗಕ್ಕೆ ದೂರು ಸಲ್ಲಿಸಿದ್ದರು. ದೂರಿನಲ್ಲಿ ಬುಡಕಟ್ಟು ವ್ಯವಹಾರಗಳ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ ಸೆಕ್ಷನ್ ೩(೨)ರಡಿ ಕೈಗೊಳ್ಳುವ ಮೂಲ ಸೌಕರ್ಯಗಳ ಕಾಮಗಾರಿಗಳಿಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಅಥವಾ ಪ್ರತ್ಯೇಕ ಅರಣ್ಯ ಅನುಮೋದನೆ ಅಗತ್ಯವಿಲ್ಲ. ಆದರೆ ಕುದುರೆಮುಖ ವನ್ಯಜೀವಿ ವಿಭಾಗ ಕಾಯಿದೆ ಮತ್ತು ನಿಯಮಗಳಲ್ಲಿ ಇಲ್ಲದ ಷರತ್ತುಗಳನ್ನು ವಿಧಿಸುತ್ತಿದ್ದು ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಯಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಈ ದೂರಿನ ಆಧಾರದ ಮೇಲೆ ಪ್ರಕರಣವನ್ನು ಪರಿಶೀಲಿಸಿದ ರಾಷ್ಟ್ರೀಯ ಪರಿಶಿಷ್ಟ ವರ್ಗಗಳ ಆಯೋಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಂ ಬಾಬು ಅವರಿಗೆ ನೋಟಿಸ್ ಜಾರಿಗೊಳಿಸಿದ್ದು ದೂರಿನಲ್ಲಿ ಉಲ್ಲೇಖಿಸಿರುವ ಆರೋಪಗಳಿಗೆ ಸಂಬಂಧಿಸಿದಂತೆ ೧೫ ದಿನಗಳೊಳಗೆ ಸಮಗ್ರ ವರದಿ ಹಾಗೂ ಉತ್ತರ ಸಲ್ಲಿಸುವಂತೆ ಸೂಚಿಸಿದೆ.








