ಸೌಜನ್ಯ ಪ್ರಕರಣ: ಪರಿಹಾರ ನೀಡುವಂತೆ ಆಗ್ರಹಿಸಿಸಂತೋಷ್ ರಾವ್ ಸಲ್ಲಿಸಿದ್ದ ಅರ್ಜಿ ಸುಪ್ರೀಂಕೋರ್ಟ್‌ನಲ್ಲಿ ವಜಾ

0

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ೧೩ ವರ್ಷಗಳ ಹಿಂದೆ ನಡೆದಿರುವ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕಾರ್ಕಳದ ಸಂತೋಷ್ ರಾವ್ ತನಗೆ ಪರಿಹಾರ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ವಜಾಗೊಳಿಸಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸಂತೋಷ್ ರಾವ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಯಾವುದೇ ಸೂಕ್ತ ಕಾರಣಗಳು ಕಂಡು ಬರುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ. ಸಂತೋಷ್ ರಾವ್ ಅವರು ಪರಿಹಾರಧನಕ್ಕೆ ಅರ್ಹರು ಎಂದು ಭಾವಿಸಿದರೆ ಸೂಕ್ತ ಪರಿಹಾರಕ್ಕಾಗಿ ಸಂಬಂಧಪಟ್ಟ ಕೆಳಹಂತದ ನ್ಯಾಯಾಲಯ ಅಥವಾ ಸೂಕ್ತ ವೇದಿಕೆಯ ಮುಂದೆ ಸ್ವತಂತ್ರವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.

ಪ್ರಕರಣದ ವಿವರ: ಧರ್ಮಸ್ಥಳ ಗ್ರಾಮದ ಪಾಂಗಳದ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿಯಾಗಿದ್ದು ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಕು. ಸೌಜನ್ಯ ಅವರು ೨೦೧೨ರ ಅ. ೯ರಂದು ಕಾಣೆಯಾಗಿದ್ದರು. ಈ ಕುರಿತು ಸೌಜನ್ಯ ಅವರ ತಂದೆ ಚಂದಪ್ಪ ಗೌಡ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮರು ದಿನ ಮಣ್ಣಸಂಕದಲ್ಲಿ ಅರೆನಗ್ನ ಸ್ಥಿತಿಯಲ್ಲಿ ಸೌಜನ್ಯ ಅವರ ಶವ ಪತ್ತೆಯಾಗಿತ್ತು. ಆಕೆಯನ್ನು ಬರ್ಬರವಾಗಿ ಅತ್ಯಾಚಾರ ಮಾಡಿ ಕೊಲೆ ಮಾಡಿರುವುದು ಈ ವೇಳೆ ಬೆಳಕಿಗೆ ಬಂದಿತ್ತು. ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಬಳಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವಾಗಿ ಮಾರ್ಪಡಿಸಿದ್ದರು. ನಂತರ ಘಟನಾ ಸ್ಥಳದ ಆಸುಪಾಸಿನಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಕಾರ್ಕಳದ ಸಂತೋಷ್ ರಾವ್ ಎಂಬಾತನನ್ನು ಬಂಧಿಸಲಾಗಿತ್ತು. ಈ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರತಿಭಟನೆ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು. ಮೊದಲು ಬೆಳ್ತಂಗಡಿ ಠಾಣಾ ಪೊಲೀಸರು ನಡೆಸಿದ್ದ ತನಿಖೆಯನ್ನು ನಂತರ ಸಿಐಡಿಗೆ ವರ್ಗಾಯಿಸಲಾಗಿತ್ತು. ಸಿಐಡಿ ತನಿಖೆಯ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದ್ದರಿಂದ ಬಳಿಕ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. ೨೦೧೬ರಲ್ಲಿ ತನಿಖೆ ಪೂರ್ಣಗೊಳಿಸಿದ್ದ ಸಿಬಿಐ ಸಂತೋಷ್ ರಾವ್ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು. ೧೧ ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಸಿಬಿಐ ವಿಶೇಷ ನ್ಯಾಯಾಲಯ ೨೦೨೩ರ ಜೂನ್ ೧೬ರಂದು ತೀರ್ಪು ನೀಡಿ ಆರೋಪಿ ಸಂತೋಷ್ ರಾವ್ ನಿರ್ದೋಷಿ ಎಂದು ಹೇಳಿತ್ತು. ಪ್ರಕರಣದಲ್ಲಿ ನಿರಪರಾಧಿಯಾಗಿದ್ದರೂ ಸುದೀರ್ಘ ಅವಧಿಯಲ್ಲಿ ತನ್ನನ್ನು ಜೈಲಿನಲ್ಲಿರಿಸಿರುವುದರಿಂದ ತನಗೆ ತೀವ್ರ ತೊಂದರೆಯಾಗಿರುವುದರಿಂದ ಪರಿಹಾರ ಕೊಡಲು ಆದೇಶಿಸಬೇಕು ಎಂದು ಸಂತೋಷ್ ರಾವ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ಇದೀಗ ಸುಪ್ರೀಂಕೋರ್ಟ್ ವಜಾಗೊಳಿಸಿದೆ.

LEAVE A REPLY

Please enter your comment!
Please enter your name here