






ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ವಿಠಲ ಗೌಡ ಅವರಿಗೆ ಬೆಂಗಳೂರು ನ್ಯಾಯಾಲಯ ಆದೇಶ ನೀಡಿದ್ದ ಒಂದು ತಿಂಗಳ ಕಾರಾಗೃಹ ಶಿಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡದಂತೆ ನಿರ್ಬಂಧ ವಿಧಿಸಿದ್ದರೂ ನ್ಯಾಯಾಲಯದ ಆದೇಶ ಉಲ್ಲಂಸಿದ್ದಕ್ಕಾಗಿ ಕು. ಸೌಜನ್ಯ ಅವರ ತಾಯಿ ಕುಸುಮಾವತಿ ಚಂದಪ್ಪ ಗೌಡ ಅವರ ಸಹೋದರ ವಿಠಲ ಗೌಡ ಅವರಿಗೆ ಬೆಂಗಳೂರು ನ್ಯಾಯಾಲಯ ಒಂದು ತಿಂಗಳ ಸಜೆ ವಿಧಿಸಿ ಐದು ತಿಂಗಳ ಹಿಂದೆ ಆದೇಶ ನೀಡಿತ್ತು. ಬಳಿಕ ತಲೆ ಮರೆಸಿಕೊಂಡಿದ್ದ ವಿಠಲ ಗೌಡ ಸ್ಥಳೀಯ ಪೋಲೀಸರಿಗೂ ಸಿಗದೇ ಚಳ್ಳೆ ಹಣ್ಣು ತಿನ್ನಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ವಿಠಲ ಗೌಡ ಅವರನ್ನು ಬಂಧಿಸಲು ಜೂ.೨೭ರಂದು ಬೆಂಗಳೂರಿನಿಂದ ಕೋರ್ಟ್ ಅಧಿಕಾರಿಗಳೊಂದಿಗೆ ಆಗಮಿಸಿದ್ದ ಪೊಲೀಸರು ವಿವಿಧೆಡೆ ಶೋಧ ನಡೆಸಿದ್ದರು.


ವಿಠಲ ಗೌಡ ಅವರ ಮನೆ, ಕುಸುಮಾವತಿಯವರ ಮನೆ, ಮಹೇಶ್ ಶೆಟ್ಟಿ ತಿಮರೋಡಿ ಮನೆ ಸಹಿತ ಹಲವೆಡೆ ಶೋಧ ನಡೆಸಿ ವಿಠಲ ಗೌಡರ ಬಂಧನಕ್ಕೆ ಬಲೆ ಬೀಸಿದ್ದರು. ಆದರೂ ವಿಠಲ ಗೌಡ ಪತ್ತೆಯಾಗಿರಲಿಲ್ಲ.
ಈ ಮಧ್ಯೆ ಬೆಂಗಳೂರು ನ್ಯಾಯಾಲಯದ ಆದೇಶ ಪ್ರಶ್ನಿಸಿ ವಿಠಲ ಗೌಡ ಉಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ವಿಠಲ ಗೌಡ ಅವರ ಅರ್ಜಿಯನ್ನು ಪುರಸ್ಕರಿಸಿದ್ದು ಬೆಂಗಳೂರು ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯ ಆದೇಶಕ್ಕೆ ತಡೆ ನೀಡಿದೆ.









