ಬೆಳ್ತಂಗಡಿ ತಾಲೂಕು ಪಂಚಾಯಿತಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

0

ಬೆಳ್ತಂಗಡಿ: ಸದಾಕಾಲಕ್ಕೂ ಅನ್ವಯವಾಗುವ ವಿಷಯ ವಿಚಾರ ಧಾರೆಗಳನ್ನು ಸವಿಸ್ತಾರವಾಗಿ ವಿವರಿಸಿದ ಕೃತಿ, ವಾಲ್ಮೀಕಿ ಅವರ ಶ್ರೇಷ್ಠ ರಾಮಾಯಣವು ಜಗತ್ತಿಗೆ ಆದರ್ಶವಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ತಾಲೂಕು ಪಂಚಾಯಿತಿಯ ನೇತ್ರಾವತಿ ಸಂಭಾಂಗಣದಲ್ಲಿ ಅ.26ರಂದು ಆಯೋಜಿಸಲಾದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆದರ್ಶಪೂರ್ಣ ಜೀವನ ನಡೆಸಲು ವಾಲ್ಮೀಕಿ ರಾಮಾಯಣವು ಪ್ರೇರಣೆಯಾಗಲಿದ್ದು ರಾಮಾಯಣದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಡು ಯಶಸ್ಸು ಕಾಣಬೇಕು ಎಂದರು.

ಉಜಿರೆಯ ಎಸ್.ಡಿ.ಎಂ.‌ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ ಹಾಗೂ ಸಹ ಪ್ರಾಧ್ಯಾಪಕ ಡಾ.ಹಂಪೇಶ್ ಕೆ.ಎಸ್. ಅವರು ಭಾಗವಹಿಸಿ ಪ್ರಧಾನ ಭಾಷಣ ಮಾಡಿದರು.ತಾಲೂಕು ಪಂಚಾಯತ್ ಕಾರ್ಯನಿರ್ವಹಕಾಧಿಕಾರಿ ಭವಾನಿಶಂಕರ್, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿಯ ಸಹಾಯಕ ನಿರ್ದೇಶಕ ಧನಂಜಯ ಎನ್.ಎಸ್., ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ., ತಹಶೀಲ್ದಾರ್ ಎಸ್.ಎನ್. ನರಗುಂದ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ರಾಜೇಂದ್ರ ಕೃಷ್ಣನ್‌, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ರಾಜಶ್ರೀ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕಿನ ಎಲ್ಲಾ ಇಲಾಖಾ ಮುಖ್ಯಸ್ಥರು, ಸಿಬ್ಬಂದಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳು, ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ:ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ವ್ಯಾಸಂಗ ಮಾಡಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಬಾಲಕ ಬಾಲಕಿಯರ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ವಂದೇ ಮಾತರಂ ಮತ್ತು ನಾಡಗೀತೆ ಹಾಡಿದರು. ಮುಂಡಾಜೆ ನವೋದಯ ವಸತಿ ಶಾಲೆ ಪ್ರಾಂಶುಪಾಲ ಮುರಳಿಧರ್‌ ಸ್ವಾಗತಿಸಿ, ಸಂಜೀವಿನಿ ವಲಯ ಮೇಲ್ವಿಚಾರಕ ಜಯಾನಂದ ವಂದಿಸಿದರು. ಸಮಾಜ ಕಲ್ಯಾಣ ಇಲಾಖೆಯ ಬುಡಕಟ್ಟು ಕಲ್ಯಾಣ ವಿಸ್ತರಣಾಧಿಕಾರಿ ಹೇಮಲತಾ ನಿರೂಪಿಸಿದರು.

LEAVE A REPLY

Please enter your comment!
Please enter your name here