







ಬೆಳ್ತಂಗಡಿ, ಅಕ್ಟೋಬರ್ 28: ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬುಧವಾರ ಶಾಲೆಯ ಇಕೋ ಕ್ಲಬ್ ವತಿಯಿಂದ ಮುಖ್ಯ ಶಿಕ್ಷಕರ ಸಹಕಾರದೊಂದಿಗೆ ಇ-ತ್ಯಾಜ್ಯ ಸಂಗ್ರಹಣೆ ಮತ್ತು ಜವಾಬ್ದಾರಿಯುತ ವಿಲೇವಾರಿ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಇಂದಿನ ತಂತ್ರಜ್ಞಾನ ಯುಗದಲ್ಲಿ ಮೊಬೈಲ್, ಕಂಪ್ಯೂಟರ್, ಬ್ಯಾಟರಿ ಹಾಗೂ ಇತರ ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆ ಹೆಚ್ಚಾಗುತ್ತಿದ್ದು, ಅವುಗಳಿಂದ ಉಂಟಾಗುವ ಇ-ತ್ಯಾಜ್ಯವನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಅತ್ಯಗತ್ಯವಾಗಿದೆ. ಇ-ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುವುದರಿಂದ ಪರಿಸರ ಹಾಗೂ ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಹುದು.


ಈ ಕುರಿತು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.ಕಾರ್ಯಕ್ರಮದ ಅಂಗವಾಗಿ ಇ-ತ್ಯಾಜ್ಯದ ನಿರ್ವಹಣೆ, ಮರುಬಳಕೆ ಹಾಗೂ ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಜ್ಞಾನವನ್ನು ಪ್ರದರ್ಶಿಸಿದರು.
ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನ ಹಾಗೂ ಸಹಕಾರದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.ಪರಿಸರ ಸಂರಕ್ಷಣೆಯ ಮಹತ್ವವನ್ನು ಅರಿತು, ಇ-ತ್ಯಾಜ್ಯವನ್ನು ಜವಾಬ್ದಾರಿಯುತವಾಗಿ ವಿಲೇವಾರಿ ಮಾಡುವ ಅಭ್ಯಾಸವನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಮೂಲಕ ಸಂದೇಶ ನೀಡಲಾಯಿತು.









